ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ 'ಬಿ' ರಿಪೋರ್ಟ್ ಅಂಗೀಕೃತ; ಕೆ.ಎಸ್.ಈಶ್ವರಪ್ಪ ನಿರಾಳ: ವರದಿ
ಬೆಂಗಳೂರು, ಜು.15: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಉಲ್ಲೇಖಿಸಿ ಜನಪ್ರತಿನಿಧಿಗಳ ನ್ಯಾಯಾಲಯ ‘ಬಿ’ ರಿಪೋರ್ಟ್ ಅಂಗೀಕರಿಸಿದೆ ಎಂದು ವರದಿಯಾಗಿದೆ.
ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಪೊಲೀಸರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ‘ಬಿ’ ರಿಪೋರ್ಟ್‍ಸಲ್ಲಿಕೆ ಮಾಡಿದ್ದರು. ಈ ‘ಬಿ’ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಾದ-ಪ್ರತಿವಾದ ಆಲಿಸಿಬಿ ರಿಪೋರ್ಟ್ ಅಂಗೀಕರಿಸಿದೆ ಎಂದು ಮೂಲಗಳು ತಿಳಿಸಿವೆ.
ಏನಿದು ಪ್ರಕರಣ?: ಉಡುಪಿಯ ಶಾಂಭವಿ ಲಾಡ್ಜ್‍ನಲ್ಲಿ 2022ರ ಎಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಕಮೀಷನ್ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.