ಬೆಂಗಳೂರು | ರಾಹುಲ್ ಗಾಂಧಿ ವಿರುದ್ಧ ಅವಹೇಳನಾಕಾರಿ ಪೋಸ್ಟ್ : ಎಫ್‍ಐಆರ್ ದಾಖಲು
ಬೆಂಗಳೂರು: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಹಚರರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ಇಲ್ಲಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
‘ಅಹಂ ಬ್ರಹ್ಮಾಸ್ಮಿ’ ಎಂಬಾತನ ವಿರುದ್ಧ ರಾಜ್ಯ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಹಲವರ ವಿರುದ್ಧ ಆರೋಪಿ ಅಹಂ ಬ್ರಹ್ಮಾಸ್ಮಿ ಎಂಬಾತ ಸುಳ್ಳು ಆರೋಪ, ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
‘ರುದ್ರ 1008’ ಎನ್ನುವ ಎಕ್ಸ್ ಖಾತೆಯಿಂದ ಅಹಂ ಬ್ರಹ್ಮಾಸ್ಮಿ ಪೋಸ್ಟ್ ಹಾಕಿದ್ದು, ‘2006ರಲ್ಲಿ ಅಮೇಥಿಯಲ್ಲಿ ರಾಹುಲ್ ಗಾಂಧಿ ಮತ್ತು ಅವರ ಆರು ಜನ ಗುಂಪು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ?. ಮಹಿಳೆ ಮತ್ತು ಅವರ ಕುಟುಂಬ ನಿಗೂಢವಾಗಿ ನಾಪತ್ತೆಯಾಗಿದೆ ಹಿಂದಿನ ರಹಸ್ಯವೇನು’ ಎಂದು ಬರೆದುಕೊಂಡಿದ್ದಾರೆ.
ಇದು ಆಧಾರ ರಹಿತ ಆರೋಪವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿಯನ್ನು ಕೂಡಲೇ ಆತನನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ರಮೇಶ್ ಬಾಬು ದೂರಿನಲ್ಲಿ ಒತ್ತಾಯಿಸಿದ್ದಾರೆ.