ಬೆಂಗಳೂರು | ರೇವ್ ಪಾರ್ಟಿ ಪ್ರಕರಣ : 30 ಮಂದಿಗೆ ನೋಟಿಸ್ ಜಾರಿ ಮಾಡಿದ ಸಿಸಿಬಿ

Update: 2024-06-07 12:08 GMT

ಬೆಂಗಳೂರು : ಇತ್ತೀಚೆಗೆ ನಗರದ ಹೊರವಲಯದಲ್ಲಿರುವ ಫಾರ್ಮ್‍ಹೌಸ್‍ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ 30 ಮಂದಿಗೆ ಸಿಸಿಬಿ ನೋಟಿಸ್ ನೀಡಿರುವುದು ವರದಿಯಾಗಿದೆ.

ಜಿ.ಎಂ.ಫಾರ್ಮ್ ಹೌಸ್‍ನಲ್ಲಿ ಹುಟ್ಟುಹಬ್ಬದ ನೆಪದಲ್ಲಿ ಆಯೋಜಿಸಿದ್ದ ರೇವ್ ಪಾರ್ಟಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಆಂಧ್ರ ಮೂಲದ ಸಿನಿಮಾ ನಟಿಯರು, ಉದ್ಯಮಿಗಳು ಸೇರಿದಂತೆ ಅನೇಕರು ಒಳಗೊಂಡಿದ್ದರು. ಪಾರ್ಟಿಯಲ್ಲಿ ಯಥೇಚ್ಚವಾಗಿ ಡ್ರಗ್ಸ್ ಬಳಕೆ ಮಾಡಿದ್ದ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು.

ಪಾರ್ಟಿಯಲ್ಲಿ ಭಾಗವಹಿಸಿದ್ದ 100ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ರಕ್ತಪರೀಕ್ಷೆ ನಡೆಸಲಾಗಿತ್ತು. ಈ ಪೈಕಿ 86 ಮಂದಿ ಡ್ರಗ್ಸ್ ಸೇವನೆ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಆರೋಪಿಗಳು ವಿಚಾರಣೆಗೆ ಗೈರು ಹಾಜರಾಗಿದ್ದರು. ಇದೀಗ ಸಿಸಿಬಿ ವಿಚಾರಣೆ ಹಾಜರಾಗುವಂತೆ ಮತ್ತೆ ನೋಟಿಸ್ ನೀಡಿದೆ.

ನಟಿ ಹೇಮಾಗೆ ಜೂ.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆನೇಕಲ್‍ನ ಜೆಎಂಎಫ್‍ಸಿ ಕೋರ್ಟ್ ಆದೇಶಿಸಿದೆ. ಫಾರ್ಮ್ ಹೌಸ್‍ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ಹೇಮಾ ಅವರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್ ಆರೋಪಿಗೆ 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.

ಹೇಮಾ ಅವರ ವಿಚಾರಣೆ ನಡೆಸುವ ಅಗತ್ಯವಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ನಟಿಯನ್ನು ಬಾಡಿ ವಾರೆಂಟ್ ಮೇಲೆ ಜೂ.5ರ ಬುಧವಾರ ವಶಕ್ಕೆ ಪಡೆದುಕೊಂಡಿದ್ದರು. ಬಾಡಿ ವಾರೆಂಟ್ 24 ಗಂಟೆಯ ಅವಧಿ ಮುಕ್ತಾಯವಾದ ಹಿನ್ನೆಲೆ ಅವರನ್ನು ಗುರುವಾರ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್ ಜೂ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News