ಡಿಕೆಶಿ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾ | ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ : ಯತ್ನಾಳ್
ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್ ಪಡೆದಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ಗುರುವಾರ ಎತ್ತಿಹಿಡಿದಿದ್ದು, ಕ್ಯಾಬಿನೆಟ್ ನಿರ್ಧಾರ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾ ಗೊಳಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, "ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಇಲ್ಲಿಗೆ ನಿಲ್ಲುವುದಿಲ್ಲ." ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಈ ಕುರಿತಂತೆ ಪೋಸ್ಟ್ ಹಂಚಿಕೊಂಡ ಅವರು, "ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಲು ನೀಡಿದ್ದ ಸಮ್ಮತ್ತಿ ಹಿಂಪಡೆದಿದ್ದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ನಾವು ಹಾಕಿದ್ದ ದಾವೆಯನ್ನು ತಿರಸ್ಕರಿಸಿದೆ. ಘನ ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತಾ, ಸರ್ವೋಚ್ಚ ನ್ಯಾಯಾಲಯದಲ್ಲಿ ನಾವು ಇದನ್ನು ಪ್ರಶ್ನಿಸುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ನಾವು ಕೊಂಡೊಯ್ಯುತ್ತೇವೆ" ಎಂದು ಹೇಳಿದ್ದಾರೆ.