ಉಪ ಚುನಾವಣೆ ಫಲಿತಾಂಶ ಸರಕಾರಕ್ಕೆ ಜನಾದೇಶವಲ್ಲ : ಬಸವರಾಜ ಬೊಮ್ಮಾಯಿ
ಬೆಂಗಳೂರು : ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪ ಚುನಾವಣೆ ಸರಕಾರದ ಪರವಾಗಿರುತ್ತವೆ. ನಾವು ಅಧಿಕಾರದಲ್ಲಿ ಇದ್ದಾಗ 17 ಉಪ ಚುನಾವಣೆಗಳಲ್ಲಿ 13 ಉಪ ಚುನಾವಣೆ ಗೆದ್ದಿದ್ದೇವೆ. ಕಾಂಗ್ರೆಸ್ ನವರು ಇದು ಸರಕಾರದ ಪರ ಜನರ ತೀರ್ಪು ಅಂತ ತಿಳಿದುಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.
ಈ ಚುನಾವಣೆ ಫಲಿತಾಂಶ ಉಪಚುನಾವಣೆ ನಡೆದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಇನ್ನು ಗ್ಯಾರೆಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ತಮ್ಮ ಪಕ್ಷದ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯ ಸರಕಾರ ಯಾವುದೇ ಹಣಕಾಸಿನ ಸಿದ್ದತೆ ಮಾಡಿಕೊಳ್ಳದೇ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದಾರೆ ಎಂದು ಅವರು ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಲಕ್ಷ ಕೋಟಿ ರೂ.ಗಿಂತಲೂ ಹೆಚ್ಚು ಸಾಲ ಮಾಡಿದ್ದಾರೆ. ರಾಜ್ಯ ಸರಕಾರದಲ್ಲಿ ಹಣಕಾಸು ನಿರ್ವಹಣೆ ಕಷ್ಟವಾಗಿದೆ. ಹದಿನೈದನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸುಮಾರು ಎರಡು ಸಾವಿರ ಕೋಟಿ ರೂ.ಗಿಂತಲೂ ಹೆಚ್ಚು ಹಣ ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರಕಾರ ಬಿಡುಗಡೆ ಮಾಡಬೇಕಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರು, ಗುತ್ತಿಗೆ ನೌಕರರಿಗೆ ಸಂಬಳ ಆಗುತ್ತಿಲ್ಲ. ಹಣ ಬಿಡುಗಡೆಯಾಗುತ್ತಿಲ್ಲ ಎನ್ನುವ ಕಾರಣಕ್ಕೆ ಟೆಂಡರ್ ಕರೆದರೂ ಕೆಲಸ ಮಾಡಲು ಗುತ್ತಿಗೆದಾರರು ಬರುತ್ತಿಲ್ಲ ಎಂದು ಅವರು ಹೇಳಿದರು.
ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಎಲ್ಲರೂ ಬಿಜೆಪಿ ಪರವಿದ್ದಾರೆ. ಕೆಲವು ವಿಚಾರಗಳಲ್ಲಿ ಭಿನ್ನ ಅಭಿಪ್ರಾಯಗಳಿವೆ. ಒಂದು ತಿಂಗಳಲ್ಲಿ ಎಲ್ಲವೂ ಸರಿಯಾಗುವ ವಿಶ್ವಾಸವಿದೆ. ಬಿಜೆಪಿಯ ಒಂದು ತಂಡ ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದರು.