ಚಳಿಗಾಲದ ಅಧಿವೇಶನ | ಕಿತ್ತೂರು ಕಲ್ಯಾಣ ಪ್ರಾಂತ್ಯದ ಅಭಿವೃದ್ಧಿ ಕುರಿತು ಚರ್ಚೆಗೆ ಆದ್ಯತೆ : ಸಭಾಪತಿ ಹೊರಟ್ಟಿ
ಬೆಳಗಾವಿ : ಬೆಳಗಾವಿಯಲ್ಲಿ ಡಿ.9ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನ ಯಶಸ್ಸಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆಯ ನಂತರ ಸಂಪೂರ್ಣ ಕಿತ್ತೂರು ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಪರಿಷತ್ತಿನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳು ಹಾಗೂ 81 ಗಮನ ಸೆಳೆಯುವ ಸೂಚನೆಗಳು ಬಂದಿವೆ. ಮೊದಲ ವಾರ ಮಂಗಳವಾರ ಹಾಗೂ ಬುಧವಾರಗಳಂದು ಯುಕೆಪಿ, ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತ ಚರ್ಚೆಗಳಿಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.
ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಲು ಕ್ರಮವಹಿಸಲಾಗುತ್ತಿದ್ದು, ಪರಿಷತ್ ಸದಸ್ಯರ ವೇದಿಕೆ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರಕಾರಕ್ಕೆ ಸಲಹೆ ನೀಡಲು ಕ್ರಮ ವಹಿಸಲಾಗುವದು. ಸದನದಲ್ಲಿ ರಚನಾತ್ಮಕ ಚರ್ಚೆಗೆ ಪರಿಷತ್ ಸದಸ್ಯರ ಜತೆ ಈಗಾಗಲೇ ಚರ್ಚಿಸಲಾಗಿದ್ದು, ಸದನ ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ. ಶಾಸಕರ ಹಾಜರಾತಿ ಹೆಚ್ಚಳಕ್ಕೆ ಆದ್ಯತೆ ನೀಡಲಾಗುವುದು. ಸುವರ್ಣ ವಿಧಾನಸೌಧ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಸವರಾಜ ಹೊರಟ್ಟಿ ತಿಳಿಸಿದರು.
ಅಧಿವೇಶನ ನಡೆಸಲು ಈ ಬಾರಿ 20 ಕೋಟಿ ರೂ. ಅಂದಾಜಿಸಲಾಗಿದೆ. ಶಾಸಕರ ಭವನ ನಿರ್ಮಿಸಲು ಕೆಲವು ಪ್ರಸ್ತಾವನೆಗಳು ಬಂದಿವೆ. ಇವುಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವದು. ತಾಜ್ ಗ್ರೂಪ್, ಕೆ.ಎಲ್.ಇ. ಹೀಗೆ ಅನೇಕ ಸಂಸ್ಥೆಗಳು ಶಾಸಕರ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದ್ದು ಮುಖ್ಯಮಂತ್ರಿ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಬೆಳಗಾವಿ ವಿಭಜನೆ ಸಾಧಕ-ಬಾಧಕಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚೆಯಾಗಬೇಕಿದೆ ಎಂದು ಬಸವರಾಜ ಹೊರಟ್ಟಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.