ಹಣ ಬಿಡುಗಡೆಗೆ ಬಿಬಿಎಂಪಿ ವಿಳಂಬ: ಎಚ್‍ಡಿಕೆ ಮೊರೆ ಹೋದ ಗುತ್ತಿಗೆದಾರರು

Update: 2023-08-07 17:28 GMT

ಬೆಂಗಳೂರು, ಆ.7: 26 ತಿಂಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ತಾವು ಮಾಡಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಮಾಡದಿರುವ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ, ಕುಮಾರಸ್ವಾಮಿಯನ್ನು ಭೇಟಿಯಾದ ಗುತ್ತಿಗೆದಾರರು, ಪಾಲಿಕೆಯ ಮುಖ್ಯ ಆಯುಕ್ತರು ಬಿಲ್ ಪಾವತಿಗೆ ಮೀನಾಮೇಷ ಎಣಿಸುತ್ತಿದ್ದಾರೆ. ಬಿಲ್ ಬಾಕಿ ಉಳಿಸಿಕೊಂಡು, ಈಗ ತನಿಖೆ ಆಗಬೇಕು ಅಂತಿದ್ದಾರೆ. ನಮ್ಮ ಮನವಿಗೆ ಅವರು ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಈಗಾಗಲೇ ಹಲವು ಗುತ್ತಿಗೆದಾರರು ದಯಾಮರಣ ಕೋರಿದ್ದಾರೆ. ಮಂಗಳೂರಿನಲ್ಲಿ ಒಬ್ಬ ಗುತ್ತಿಗೆದಾರ, ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಾಲಿಕೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಅವರು ತಮ್ಮ ಅಳಲನ್ನು ಹೇಳಿಕೊಂಡರು.

ಗುತ್ತಿಗೆದಾರರ ಅಹವಾಲು ಆಲಿಸಿದ ಕುಮಾರಸ್ವಾಮಿ, ಈ ಬಗ್ಗೆ ಸರಕಾರದ ಮೇಲೆ ಒತ್ತಡ ತರುತ್ತೇನೆ. ನಿಮ್ಮ ಬಾಕಿ ಹಣ ತಡೆ ಹಿಡಿಯುವುದು ಸರಿಯಲ್ಲ. ಹಣ ಬಿಡುಗಡೆ ಮಾಡದಿದ್ದರೆ ನಿಮ್ಮ ಜತೆ ನಾನು ಧರಣಿ ಕೂರುತ್ತೇನೆ. ನೀವು ಯಾರು ಅಂಜಬೇಕಿಲ್ಲ ಎಂದು ಭರವಸೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News