ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ | ಶಾಸಕ ಸತೀಶ್ ಸೈಲ್ ದೋಷಿ, ಬಂಧನ

Update: 2024-10-24 15:41 GMT

PC : Facebook

ಬೆಂಗಳೂರು : 2010ರಲ್ಲಿ ನಡೆದಿದ್ದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಿಸಿದ ಬೆನ್ನಲ್ಲೇ ಸಿಬಿಐ ಅವರನ್ನು ಬಂಧಿಸಿದೆ.

ಗುರುವಾರ ನ್ಯಾಯಾಲಯ ಆದೇಶ ನೀಡುತ್ತಿದ್ದಂತೆ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ ಕೇಂದ್ರಿಯ ತನಿಖಾ ದಳದ ಅಧಿಕಾರಿಗಳು, ವೈದ್ಯಕೀಯ ತಪಾಸಣೆ ಬಳಿಕ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದರು.

ಸತೀಶ್ ಸೈಲ್ ಅವರನ್ನು ಅಪರಾಧಿ ಎಂದು ಆದೇಶ ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಅ.25ಕ್ಕೆ ಕಾಯ್ದಿರಿಸಿದೆ. ಅದರಂತೆ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿರುವ ಸಿಬಿಐ ತಂಡ ಶುಕ್ರವಾರ ಮಧ್ಯಾಹ್ನ 12.30ಕ್ಕೆ ನ್ಯಾಯಾಲಯದ ಎದುರು ಹಾಜರುಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ಬೇಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳಲ್ಲಿ ಸಿಬಿಐ ತನಿಖೆ ನಡೆಸಿ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲಾಗಿತ್ತು. ವಾದ-ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಗುರುವಾರ ಅಂತಿಮ ಆದೇಶವನ್ನು ಹೊರಡಿಸಿದ್ದಾರೆ.

ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳೆಯಿ ಸೇರಿದಂತೆ ಹಲವರ ವಿರುದ್ಧದ ಪ್ರಕರಣ ದಾಖಲಾಗಿತ್ತು. ಇದೀಗ ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ, ಶಾಸಕ ಸತೀಶ್ ಸೇರಿ ಎಲ್ಲಾ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.

ಒಟ್ಟು 6 ಪ್ರಕರಣಗಳಿಗೆ ಸಂಬಂಧಿಸಿ ತೀರ್ಪು ಪ್ರಕಟಿಸಿದ್ದು,ಜಪ್ತಿ ಮಾಡಿ ಇಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಿಸಿದ ಆರೋಪವಿತ್ತು. ಇನ್ನೂ, ಶುಕ್ರವಾರ ಸಂಜೆಯ ವೇಳೆಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಾಧ್ಯತೆಗಳಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News