ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಬೆಂಗಳೂರು : ಇಲ್ಲಿನ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ(ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಕಾರ್ಯಾಲಯವು, ‘ಬೆಂಗಳೂರಿನ ಕಟ್ಟಡ ಕುಸಿತ ದುರಂತದಲ್ಲಿ ಹಲವು ಜೀವಹಾನಿಯಾಗಿರುವುದನ್ನು ಕೇಳಿ ಬಹಳ ನೋವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂ., ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡಲಾಗುವುದು ’ಎಂದು ತಿಳಿಸಿದೆ.
ಮೃತರ ಸಂಖ್ಯೆ 8ಕ್ಕೆ ಏರಿಕೆ :
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಡೆದಿರುವ ಭೀಕರ ಕಟ್ಟಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ಸಂಜೆಯಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇದುವರೆಗೆ 8ಕಾರ್ಮಿಕರ ಮೃತದೇಹಗಳನ್ನ ಹೊರಗೆ ತೆಗೆಯಲಾಗಿದೆ. 14 ಜನರನ್ನು ರಕ್ಷಿಸಲಾಗಿದೆ.