ಭದ್ರಾ ಮೇಲ್ದಂಡೆ ಯೋಜನೆ | ಘೋಷಿತ ಅನುದಾನ ಕೇಂದ್ರ ಬಿಡುಗಡೆ ಮಾಡದಿದ್ದರೆ ಕೋರ್ಟ್ ಮೊರೆ : ಎಚ್.ಕೆ.ಪಾಟೀಲ್

Update: 2024-09-10 13:22 GMT

ಎಚ್.ಕೆ.ಪಾಟೀಲ್

ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಘೋಷಿಸಿದ 5,300 ಕೋಟಿ ರೂ.ಅನುದಾನ ಬಿಡುಗಡೆ ಮಾಡದಿದ್ದರೆ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಿ ನ್ಯಾಯ ಪಡೆಯಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರಕಾರ ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟ ಎಲ್ಲ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟ್ರೀಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲ ಅರ್ಹತೆ ಪಡೆದಿದೆ. ಈ ಯೋಜನೆಯ ಅನುದಾನ ನೀಡದಿದ್ದರೆ ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರ ಸರಕಾರದ ಕ್ರಮ ಪ್ರಶ್ನಿಸಿಲು ಈಗಾಗಲೇ ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸುತ್ತೇವೆ ಎಂದು ಅವರು ತಿಳಿಸಿದರು.

ಅನುಮೋದನೆಗೊಂಡಿರುವ ರಾಷ್ಟ್ರೀಯ ಯೋಜನೆಗೆ ರಾಜಕೀಯ ಉದ್ದೇಶದಿಂದ 2023ರ ಸಾರ್ವತ್ರಿಕ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಮೇಲೆ ಮುಂಗಡ ಪತ್ರದ ಭಾಷಣದಲ್ಲಿ ತಾವೇ ಘೋಷಿಸಿದ ಘೋಷಣೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರಕಾರ ಹಿಂದೇಟು ಹಾಕುತ್ತಿದೆ ಎಂದು ಎಚ್.ಕೆ.ಪಾಟೀಲ್ ದೂರಿದರು.

ರಾಜ್ಯ ಸರಕಾರದ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು 03.08.2024, 9.06.2024 ಹಾಗೂ 16.08.2023 ರಂದು ಬರೆದ ಪತ್ರಕ್ಕೆ ಉತ್ತರ ಬರೆದ ಕೇಂದ್ರ ಸರಕಾರದ ಜಲಶಕ್ತಿ ಸಚಿವಾಲಯ ಅನುದಾನ ನೀಡಲು ನಿರಾಕರಿಸಿದೆ. ಷರತ್ತುಗಳಂತೆ ಎಲ್ಲ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿರುವ ಯೋಜನೆಗೆ ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ ಎಂದು ಎಚ್.ಕೆ.ಪಾಟೀಲ್ ಆರೋಪಿಸಿದರು.

ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿಯೇ ಮಹಾದಾಯಿ ಜಲ ವಿವಾದ ಕುರಿತು ಟ್ರಿಬ್ಯೂನಲ್ ರಚಿಸಲು ಕೋರಿಕೆ ಸಲ್ಲಿಸಲಾಗಿತ್ತು. ಆದರೆ, ಟ್ರಿಬ್ಯೂನಲ್ ಅವಶ್ಯತೆ ಇಲ್ಲದಿದ್ದರೂ ಕಾಂಗ್ರೆಸ್‍ನವರು ಟ್ರಿಬ್ಯೂನಲ್ ರಚಿಸಿದರು ಎಂದು ಬೊಮ್ಮಾಯಿ ಅವರು ಟೀಕಿಸಿರುವುದು ಅವರ ನಿರ್ಲಕ್ಷ್ಯವನ್ನು ತೋರುತ್ತದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಕೇಂದ್ರ ಸರಕಾರದ ವನ್ಯಜೀವಿ ಮಂಡಳಿ ರಾಜ್ಯದ ಪ್ರತಿಷ್ಠಿತ ಈ ಮಹತ್ವದ ಯೋಜನೆಗೆ ಅಡ್ಡಗಾಲು ಹಾಕುವುದನ್ನು ಬಿಟ್ಟು ಮಂಜೂರಾತಿ ನೀಡಬೇಕು ಎಂದು ಎಚ್.ಕೆ.ಪಾಟೀಲ್ ಆಗ್ರಹಿಸಿದರು.

ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಬಿಜೆಪಿ ತಿಲಾಂಜಲಿ: ‘ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸರಕಾರಗಳು ಯಾವ ಪಕ್ಷದ್ದೇ ಆಗಿರಲಿ ಪಕ್ಷಪಾತ ರಹಿತವಾಗಿ ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ತಿಲಾಂಜಲಿ ಇಡುತ್ತಿದೆ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News