ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಅಹೋರಾತ್ರಿ ಹೋರಾಟ

Update: 2025-04-02 19:09 IST
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಅಹೋರಾತ್ರಿ ಹೋರಾಟ
  • whatsapp icon

ಬೆಂಗಳೂರು : ರಾಜ್ಯದಲ್ಲಿ ನೀರು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬುಧವಾರ ಬಿಜೆಪಿ ನಾಯಕರು ಸರಕಾರದ ವಿರುದ್ಧ ಅಹೋರಾತ್ರಿ ಹೋರಾಟಕ್ಕೆ ಚಾಲನೆ ನೀಡಿದರು.

ಇದೇ ವೇಳೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನುಡಿದಂತೆ ನಡೆದ ಸರಕಾರ ಎಂದು ಕಾಂಗ್ರೆಸ್ ಜಾಹೀರಾತು ನೀಡುತ್ತಿದೆ. ಇದು ಮನುಷ್ಯತ್ವ ಇರುವ ಸರಕಾರ ಅಲ್ಲ. ಅಧಿಕಾರಕ್ಕೆ ಬಂದ ಕೇವಲ 24 ಗಂಟೆಗಳಲ್ಲಿ ಗ್ಯಾರಂಟಿ ಅನುಷ್ಠಾನ ಮಾಡುವುದಾಗಿ ಹೇಳಿದ್ದರು. ಆದರೆ, ತಿಂಗಳುಗಳೇ ಕಳೆದರೂ ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನವಾಗಿಲ್ಲ. ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ದಯವಿಟ್ಟು ಹವಾನಿಯಂತ್ರಿತ ಕೊಠಡಿಗಳಿಂದ ಹೊರಗೆ ಬರಬೇಕು. ಅವರು ಬೆಂಗಳೂರಿಗೆ ಮಾತ್ರ ಮುಖ್ಯಮಂತ್ರಿ ಅಲ್ಲ. ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸಚಿವರ ಜೊತೆ ಪ್ರವಾಸ ಮಾಡಬೇಕು. ಬೆಲೆ ಏರಿಕೆಗೆ ತತ್ತರಿಸುತ್ತಿರುವ ರಾಜ್ಯದ ಜನರ ನೋವನ್ನು ಆಲಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಹಿಂದೆ ರಾಜ ಮಹಾರಾಜರು ಮಾರುವೇಷದಲ್ಲಿ ತೆರಳಿ ಪ್ರಜೆಗಳ ಯೋಗಕ್ಷೇಮ ವಿಚಾರಿಸುತ್ತಿದ್ದರು. ಬಳಿಕ ಜನರಿಗೆ ಅನುಕೂಲ ಆಗುವ ಯೋಜನೆ ಜಾರಿಗೊಳಿಸುತ್ತಿದ್ದರು. ಮಹಾರಾಜರ ಸ್ಥಾನದಲ್ಲಿರುವ ಸಿದ್ದರಾಮಯ್ಯನವರಿಗೆ ಕುರ್ಚಿಯ ಅಭದ್ರತೆ ಕಾಡುತ್ತಿದ್ದರೆ ಡಿ.ಕೆ.ಶಿವಕುಮಾರ್ ಅವರನ್ನೂ ಜೊತೆಗೇ ಕರೆದುಕೊಂಡು ರಾಜ್ಯ ಪ್ರವಾಸ ಮಾಡಿ ಎಂದು ವಿಜಯೇಂದ್ರ ತಿಳಿಸಿದರು.

ಮಹಿಳೆಯರಿಗೆ 2 ಸಾವಿರ ರೂ., ಉಚಿತ ವಿದ್ಯುತ್ ಸೇರಿ ವಿವಿಧ ಯೋಜನೆಗಳ ಕುರಿತು ಮುಖ್ಯಮಂತ್ರಿ ಭಾಷಣ ಮಾಡುತ್ತಾರೆ. ಆದರೆ, ಅವುಗಳು ಸರಿಯಾಗಿ ಅನುಷ್ಠಾನ ಆಗಿಲ್ಲ. ಇದು ಜನರ ಮೇಲೆ ಬೆಲೆ ಏರಿಕೆಯ ಬರೆ ಎಳೆಯುವ ಸರಕಾರ. ಬಿತ್ತನೆ ಬೀಜದ ದರ ಹೆಚ್ಚಾಗಿದೆ. ಹಿಂದಿನ 20 ತಿಂಗಳ ಆಡಳಿತದಲ್ಲಿ ಜನರು ಖುಷಿಯಿಂದ ಇದ್ದಾರೆಯೇ ಎಂಬ ಬಗ್ಗೆ ಅರಿತುಕೊಳ್ಳಲು ಸಿದ್ದರಾಮಯ್ಯ ರಾಜ್ಯ ಪ್ರವಾಸ ಮಾಡಲೇಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಇಂದು ಬಡವರು, ರೈತರು, ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲದ ದುಸ್ಥಿತಿ ಬಂದಿದೆ. ಪೆಟ್ರೋಲ್, ಡೀಸೆಲ್, ಹಾಲಿನ ದರ, ಸರಕಾರಿ ಆಸ್ಪತ್ರೆಗಳ ಶುಲ್ಕ ಹೆಚ್ಚಿಸಿದ್ದಾರೆ. ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬರುವ ಮೊದಲು ಸಾಕಷ್ಟು ಭರವಸೆಗಳನ್ನು ನಾಡಿನ ಜನತೆಗೆ ನೀಡಿತ್ತು. ಜನರ ಕಣ್ಣಿಗೆ ಮಣ್ಣೆರಚಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ವಿಜಯೇಂದ್ರ ಟೀಕಿಸಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಸಿದ್ದರಾಮಯ್ಯ ಹೆಸರಿಗಷ್ಟೇ ಮುಖ್ಯಮಂತ್ರಿ. ಅವರೀಗ ನಿದ್ದೆರಾಮಯ್ಯ ಆಗಿದ್ದಾರೆ. ಮನೆಹಾಳ ಸಿದ್ದರಾಮಯ್ಯ ಎಂದು ಜನರು ಟೀಕಿಸುತ್ತಿದ್ದಾರೆ. ಕರ್ನಾಟಕದ ಜನರ ಪಾಲಿಗೆ ಈ ಕಾಂಗ್ರೆಸ್ ಸರಕಾರ ಸತ್ತು ಹೋಗಿದೆ ಎಂದು ಅವರು ಆರೋಪಿಸಿದರು.

ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಮಾತನಾಡಿ, ಇದು ಭ್ರಷ್ಟಾಚಾರದ ಗ್ಯಾರಂಟಿ ನೀಡುವ ಸರಕಾರ. ಕರ್ನಾಟಕದಲ್ಲಿ ಬಿಜೆಪಿ ಸರಕಾರ ಮುಂದಿನ ದಿನಗಳಲ್ಲಿ ಬರಲಿದೆ. ನಮ್ಮ ಮೇಲೆ ಶೇ.40 ಪರ್ಸೆಂಟ್ ಕಮಿಷನ್‍ನ ಸುಳ್ಳು ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸುಳ್ಳು ಆರೋಪಕ್ಕಾಗಿ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಸೇರಿದಂತೆ ಬಿಜೆಪಿಯ ಮಾಜಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ರಾಜ್ಯದ ಎಲ್ಲ ಬಿಜೆಪಿ ಜಿಲ್ಲಾಧ್ಯಕ್ಷರು, ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News