ಬಿಜೆಪಿ ಬಣ ಜಗಳ: ಶಾಸಕ ಯತ್ನಾಳ್‍ಗೆ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧವೇ ಬಂಡಾಯವೆದ್ದಿರುವ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ‘ಶೋಕಾಸ್ ನೋಟಿಸ್’ ಜಾರಿ ಮಾಡಿದೆ.
ಪಕ್ಷದ ಆದೇಶ ಉಲ್ಲಂಘಿಸಿ ವಕ್ಫ್ ಆಸ್ತಿ ಸಂಬಂಧಿಸಿದಂತೆ ಅಭಿಯಾನ ಕೈಗೊಂಡಿರುವ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಸೃಷ್ಟಿಸಿದ್ದರು.
ಈ ಮಧ್ಯೆ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿಯು ಶಾಸಕ ಬಸನಗೌಡ ಯತ್ನಾಳ್‍ಗೆ ಶೋಕಾಸ್ ನೋಟಿಸ್ ನೀಡಿದ್ದು, 10 ದಿನಗಳ ಒಳಗೆ ಉತ್ತರ ನೀಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಸೂಚಿಸಿದೆ.
ನೋಟಿಸ್‍ನಲ್ಲೇನಿದೆ: ‘ಹಿರಿಯ ಮುಖಂಡರಾದ ನೀವು ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ನೀಡುತ್ತಿರುವ ಹೇಳಿಕೆಗಳು ಆಕ್ಷೇಪಾರ್ಹವಾಗಿವೆ. ಈ ಹಿಂದೆ ನೀಡಿದ್ದ ಭರವಸೆಗಳನ್ನ ಮೀರಿ ನಾಯಕತ್ವ ಟೀಕಿಸುತ್ತಿರುವುದು ಶಿಸ್ತು ಉಲ್ಲಂಘನೆಗೆ ಕಾರಣ. ನಿಮ್ಮ ಮೇಲೆ ಏಕೆ ಶಿಸ್ತು ಕ್ರಮ ಜರುಗಿಸಬಾರದು' ಎಂದು ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಪ್ರಶ್ನಿಸಿದ್ದಾರೆ.
‘ನಾಯಕತ್ವದ ವಿರುದ್ಧದ ಸಾರ್ವಜನಿಕ ಹೇಳಿಕೆಗಳು ಮತ್ತು ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ಪಕ್ಷದ ವಿವಿಧ ವೇದಿಕೆಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಹಿಂದೆ ಹಲವು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆಗ ನೀವು ಶಿಸ್ತು ಪಾಲಿಸುವುದಾಗಿ ಭರವಸೆ ನೀಡಿದರೂ ಈಗ ಅಶಿಸ್ತು ಮುಂದುವರಿದಿರುವುದು ಕಳವಳಕಾರಿಯಾಗಿದೆ. ನಿಮ್ಮ ಹಿರಿತನ ಮತ್ತು ಪಕ್ಷದ ಜೊತೆ ದೀರ್ಘಕಾಲ ನಿಂತಿರುವುದನ್ನು ಗಮನದಲ್ಲಿಟ್ಟುಕೊಂಡು ನೀವು ಹಿಂದೆ ಸಲ್ಲಿಸಿದ ವಿವರಣೆಯ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಮೃದುವಾದ ಧೋರಣೆ ತೆಗೆದುಕೊಂಡಿತ್ತು.
ಪಕ್ಷದ ನಾಯಕರ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಸಾರ್ವಜನಿಕವಾಗಿ ಮಾಡುತ್ತಿರುವುದು ಪಕ್ಷದ ನಿಯಮಗಳನ್ನು ಉಲ್ಲಂಘಿಸಿದಂತೆ. ಆದುದರಿಂದ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಇನ್ನೂ 10 ದಿನದೊಳಗೆ ವಿವರಣೆ ನೀಡಬೇಕು’ ಎಂದು ಯತ್ನಾಳ್‍ಗೆ ನೋಟಿಸ್ ನೀಡಲಾಗಿದೆ.