ಡಿ.13ರಂದು ಸರಕಾರದ ವಿರುದ್ಧ ಬಿಜೆಪಿ ಹೋರಾಟ: ಎನ್.ರವಿಕುಮಾರ್

Update: 2023-12-11 15:31 GMT

ಬೆಳಗಾವಿ: ರಾಜ್ಯ ಸರಕಾರವು ಬರ ನಿರ್ವಹಣೆಯಲ್ಲಿ ವಿಫಲ, ಶಾಸಕರಿಗೆ ಅನುದಾನ ಕಡಿತ, ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದಿರುವುದು ಸೇರಿದಂತೆ ಇನ್ನಿತರ ವಿಷಯಗಳನ್ನು ಅಧಿವೇಶನದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಡಿ.13ರಂದು ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಹೋರಾಟ ಹಮ್ಮಿಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.

ಸೋಮವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುಮಾರು 25 ಸಾವಿರಕ್ಕೂ ಹೆಚ್ಚು ರೈತರು, ಬಡವರು, ಯುವಕರು, ಮಹಿಳೆಯರು, ಕಾರ್ಮಿಕರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಇನ್ನಿತರ ಮುಖಂಡರು ಹೋರಾಟದಲ್ಲಿ ಭಾಗವಹಿಸುತ್ತಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸ್ಥಳೀಯ ಸಂಸದರು, ಶಾಸಕರು ಭಾಗವಹಿಸಲಿರುವ ಈ ಹೋರಾಟದಲ್ಲಿ ಸರಕಾರಕ್ಕೆ ಬಾರುಕೋಲು ಹಾಗೂ ಛಡಿ ಏಟು ಕೊಡುವ ಆಂದೋಲನವನ್ನು ಅಂದು ಮಾಡಲಿದ್ದೇವೆ ಎಂದು ಅವರು ವಿವರಿಸಿದರು.

ರೈತರಿಗೆ ನಾವು 7 ಗಂಟೆ ವಿದ್ಯುತ್ ಕೊಡುತ್ತಿದ್ದೆವು. ಈ ಸರಕಾರ 5 ಗಂಟೆಯೂ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಹೊಸ ಬೋರ್‍ವೆಲ್ ಕೊರೆಸಿದಾಗ ವಿದ್ಯುತ್ ಸಂಪರ್ಕಕ್ಕೆ ತಗಲುವ 2 ರಿಂದ 3 ಲಕ್ಷ ರೂ.ವೆಚ್ಚವನ್ನು ರೈತರೆ ಭರಿಸಬೇಕೆಂದು ಸರಕಾರ ತಿಳಿಸಿದೆ. ರೈತರು, ಬಡವರ ಮೇಲೆ ಬರೆ ಹಾಕುವ ಸರಕಾರ ಇದು ಎಂದು ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕೃಷ್ಣಾ, ಕಳಸಾ ಬಂಡೂರಿ ಸೇರಿ ಉತ್ತರ ಕರ್ನಾಟಕದ ಯಾವುದೇ ನೀರಾವರಿ ಯೋಜನೆಗೆ ನಯಾಪೈಸೆಯನ್ನೂ ಕೊಟ್ಟಿಲ್ಲ. ಆರು ತಿಂಗಳಾದರೂ ಒಂದು ಕಿಮೀ ರಸ್ತೆ ಮಾಡಿಲ್ಲ. ರೈತರು, ಉತ್ತರ ಕರ್ನಾಟಕದ ಬಗ್ಗೆ ಕಳಕಳಿರಹಿತ, ಅಭಿವೃದ್ಧಿ ಶೂನ್ಯ ಸರಕಾರ ಇದು ಎಂದು ಅವರು ಆರೋಪಿಸಿದರು.

ಎಸ್ಸಿ-ಎಸ್ಟಿಗಳ ಅಭಿವೃದ್ಧಿಗೆ ಮೀಸಲಿಟ್ಟ 34 ಸಾವಿರ ಕೋಟಿ ರೂ.ಗಳಲ್ಲಿ 11,500 ಕೋಟಿ ರೂ.ಗಳನ್ನು ಸರಕಾರ ಬೇರೆ ಇಲಾಖೆಗೆ ವರ್ಗಾಯಿಸಿದೆ. ದೇವರಾಜ ಅರಸು ನಿಗಮ, ಅಂಬೇಡ್ಕರ್ ನಿಗಮ, ಜಗಜೀವನ್ ರಾಂ ನಿಗಮ, ಅಂಬಿಗರ ಚೌಡಯ್ಯ ನಿಗಮ ಸೇರಿ ಅನೇಕ ಹಿಂದುಳಿದ ವರ್ಗಗಳ ನಿಗಮಗಳಿಗೆ ಒಂದು ಪೈಸೆ ಅನುದಾನ ಕೊಟ್ಟಿಲ್ಲ ಎಂದು ರವಿಕುಮಾರ್ ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಎಂ.ಬಿ.ಜಿರಲಿ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ಮಾಜಿ ಶಾಸಕ ಅನಿಲ್ ಬೆನಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿರಾದಾರ್, ಮುಖಂಡ ರವಿ ಪಾಟೀಲ್, ಜಿಲ್ಲಾ ಮಾಧ್ಯಮ ಸಂಚಾಲಕ ಶರದ್ ಪಾಟೀಲ್ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News