ಯೋಗೇಶ್ವರ್‌ಗೆ ಜೆಡಿಎಸ್ ಟಿಕೆಟ್ ಕೊಡುವಂತೆ ಬಿಜೆಪಿ ವರಿಷ್ಠರು ಕೇಳಿದ್ದಾರೆ : ಕುಮಾರಸ್ವಾಮಿ

Update: 2024-10-22 14:08 GMT

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ವರಿಷ್ಠ ನಾಯಕರು ಸಿ.ಪಿ.ಯೋಗೇಶ್ವರ್‌ಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳವಾರ ನಗರದಲ್ಲಿರುವ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಭೆಯಲ್ಲಿ ಕಾರ್ಯಕರ್ತರ ಭಾವನೆಗಳನ್ನು ಅರಿತುಕೊಂಡಿದ್ದೇನೆ. ಸ್ಥಳೀಯವಾಗಿ ಬಿಜೆಪಿ ನಾಯಕರಲ್ಲಿ ಗೊಂದಲವಿದೆ. ಇನ್ನೂ ಮೂರು ದಿನ ಸಮಯವಿದೆ. ಎಲ್ಲ ಬೆಳವಣಿಗೆ ಗಮನಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಬೆಳಗ್ಗೆಯಿಂದ ಎಲ್ಲ ಕಾಂಗ್ರೆಸ್ ನಾಯಕರು ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಸಾಲು ಸಾಲಾಗಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಮೂರು ದಿನಗಳ ಹಿಂದೆ ನಡ್ಡಾ ಅವರು ಯೋಗೇಶ್ವರ್‌ಗೆ ಜೆಡಿಎಸ್ ಪಕ್ಷದಿಂದಲೇ ಬಿ ಫಾರಂ ಕೊಡಿ ಎಂದು ಕೇಳಿದ್ದರು. ಮೊದಲು ಯಾವ ಪಕ್ಷದಿಂದಲಾದರೂ ಟಿಕೆಟ್ ಕೊಟ್ಟರೆ ನಿಲ್ಲುತ್ತೇನೆ ಎಂದು ಹೇಳುತ್ತಿದ್ದ ಯೋಗೇಶ್ವರ್, ಆ ಮೇಲೆ ವರಸೆ ಬದಲಿಸಿದರು. ಈಗ ಬಿಎಸ್ಪಿಯಿಂದ ನಿಲ್ಲುತ್ತೇನೆ ಎನ್ನುತ್ತಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರು.

ಇದಕ್ಕೂ ಮುನ್ನ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಎನ್‍ಡಿಎ ಮೈತ್ರಿ ಭದ್ರವಾಗಿದೆ. ಪ್ರಧಾನಿ ಮೋದಿ ಹಾಗೂ ದೇವೇಗೌಡರ ನಡುವಿನ ಗೌರವಭಾವ ಎಂತದ್ದು ಎನ್ನುವುದನ್ನು ನಾನು ನೋಡಿದ್ದೇನೆ. ದಿಲ್ಲಿಯ ಬಿಜೆಪಿ ನಾಯಕರು ಜೆಡಿಎಸ್ ಪಕ್ಷಕ್ಕೆ ಬಹಳ ಗೌರವ ಕೊಟ್ಟಿದ್ದಾರೆ. ನನಗೆ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ ಎಂದು ಅವರು ಹೇಳಿದರು.

ನಿಖಿಲ್‍ಗೆ ಟಿಕೆಟ್ ಕೊಡುವಂತೆ ಕಾರ್ಯಕರ್ತರ ಗದ್ದಲ: ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೊಡಬೇಕು, ಯಾವುದೇ ಕಾರಣಕ್ಕೂ ಯೋಗೇಶ್ವರ್‌ಗೆ ಕೊಡಬಾರದು. ಒಂದು ವೇಳೆ ನೀವು ಯೋಗೇಶ್ವರ್‌ ಗೆ ಮಣೆ ಹಾಕಿದರೆ ನಮ್ಮ ಆಕ್ರೋಶವನ್ನು ಎದುರಿಸಬೇಕಾಗುತ್ತದೆ. ನಿಖಿಲ್ ಹೆಸರು ಘೋಷಣೆ ಮಾಡಿ ಎಂದು ಚನ್ನಪಟ್ಟಣ ಕಾರ್ಯಕರ್ತರು ಪಟ್ಟು ಹಿಡಿದರು. ಕಾರ್ಯಕರ್ತರ ಗದ್ದಲದಿಂದಾಗಿ ಕುಮಾರಸ್ವಾಮಿ ಭಾಷಣ ಮೊಟಕುಗೊಳಿಸಿದರು.

ಸಭೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ಮಾಜಿ ಸಚಿವರಾದ ಸಾ.ರಾ.ಮಹೇಶ್, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಚನ್ನಪಟ್ಟಣ ತಾಲೂಕು ಅಧ್ಯಕ್ಷ ಜಯಮುತ್ತು, ಹಾಪ್‍ಕಾಮ್ಸ್ ದೇವರಾಜು, ಹಿರಿಯ ಮುಖಂಡ ಪ್ರಸನ್ನ, ಜಯರಾಂ ಮುಂತಾದವರು ವೇದಿಕೆಯ ಮೇಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News