ಲಂಚಕ್ಕೆ ಬೇಡಿಕೆ, ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

Update: 2024-09-17 17:08 GMT

ಬೆಂಗಳೂರು : ಲಂಚಕ್ಕೆ ಬೇಡಿಕೆ, ಜೀವ ಬೆದರಿಕೆ, ಜಾತಿ ನಿಂದನೆ ಹಾಗೂ ಮಹಿಳೆಯರ ಅವಹೇಳನ ಪ್ರಕರಣದಲ್ಲಿ ಬಂಧಿತರಾಗಿರುವ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಮುನಿರತ್ನ ಅವರ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಧೀಶರ ಮುಂದೆ ವೈಯಾಲಿಕಾವಲ್ ಠಾಣೆ ಪೊಲೀಸರು ಹಾಜರುಪಡಿಸಿದ್ದರು. ನ್ಯಾಯಾಧೀಶರ ಆದೇಶದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂಬಂಧ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ ಹಾರನಹಳ್ಳಿ, ರಿಮ್ಯಾಂಡ್ ಅರ್ಜಿಯನ್ನು ಆರೋಪಿ ಪರ ವಕೀಲರಿಗೆ ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶವಿದ್ದರೂ ತನಿಖಾಧಿಕಾರಿಗಳು ರಿಮ್ಯಾಂಡ್ ಅರ್ಜಿ ನೀಡಿಲ್ಲ. ಮುನಿರತ್ನ ವಿರುದ್ಧ ಜಾತಿ ನಿಂದನೆ ಹಾಗೂ ಜೀವ ಬೆದರಿಕೆಯಡಿ ಸೆ.13ರ ರಾತ್ರಿ ಪ್ರತ್ಯೇಕ ಎಫ್‍ಐಆರ್ ದಾಖಲಾಗಿವೆ. ದೂರು ಬರುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡು ಯಾವುದೇ ವಿಚಾರಣೆ ಮಾಡದೇ ಏಕಾಏಕಿ ಪೊಲೀಸರು ಬಂಧಿಸಿದ್ದಾರೆ ಎಂದರು.

ಇದಕ್ಕೂ ಮುನ್ನ ಜಾಮೀನು ಅರ್ಜಿಗೆ ಸರಕಾರಿ ಪರ ವಕೀಲರು ಆಕ್ಷೇಪಣೆ ವ್ಯಕ್ತಪಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು ಒಂದು ದಿನ ಕಾಲಾವಕಾಶ ಕೇಳಿದರು. ಇದೇ ವೇಳೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಸೆ.18ರ ಬುಧವಾರದಂದು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News