ಬಿಜೆಪಿ ಮೊದಲ ಸಭೆಯಲ್ಲಿ ಯತ್ನಾಳ್ ಹೇಳಿಕೆ ಕುರಿತು ಚರ್ಚೆ; ಪ್ರತಿಕ್ರಿಯೆ ನೀಡದಂತೆ ಬಿಜೆಪಿ ನಾಯಕರಿಗೆ ಸೂಚನೆ?
ಬೆಂಗಳೂರು: ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಮೊದಲ ಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯದ್ದೇ ಚರ್ಚೆ ನಡೆಸಲಾಗಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡದಂತೆ ಬಿಜೆಪಿ ನಾಯಕರಿಗೆ ಸೂಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬುಧವಾರ ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ನೂತನ ಪದಾಧಿಕಾರಿಗಳ ಸಭೆಯಲ್ಲಿ ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ 40 ಸಾವಿರ ಕೋಟಿ ರೂ., ಮೊತ್ತದ ಕೋವಿಡ್ ಅಕ್ರಮ ಬಗ್ಗೆ ಆರೋಪ ಮಾಡಿದ್ದ ಯತ್ನಾಳ್ ಕುರಿತು ಚರ್ಚಿಸಲಾಯಿತು. ಈ ವೇಳೆ ಬಹುತೇಕರು ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಹಿನ್ನೆಡೆಯಾಗಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದಾಗ ಬಹಿರಂಗವಾಗಿ ಪ್ರತಿಕ್ರಿಯೆ ನೀಡದಂತೆ ಸೂಚನೆ ನೀಡಲಾಯಿತು ಎಂದು ತಿಳಿದುಬಂದಿದೆ.
ಇನ್ನೂ ಸಭೆಯಲ್ಲಿ ಪ್ರಸ್ತಾಪಿಸಿದ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುವ ಸಂದರ್ಭದಲ್ಲಿ ನಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ. ಪ್ರತಿಯೊಂದು ಚುನಾವಣೆಯಲ್ಲೂ ಕೂಡ ವಿವಿಧ ರೀತಿಯ ಸವಾಲುಗಳಿರುತ್ತವೆ. ಆ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತು ಸಾಧನೆ ಮಾಡಲು ನಮ್ಮ ಎದುರಾಳಿಗಳನ್ನು ನಾವು ಹಗುರವಾಗಿ ಪರಿಗಣಿಸಬಾರದು ಎಂದು ಹೇಳಿದರು.
ರಾಜ್ಯದ ಕಾರ್ಯಕರ್ತರ ಮೂಲಕ ಕೇಂದ್ರ ಸರಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಬೇಕಿದೆ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಲ ತುಂಬುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆ, ವಿಧಾನಪರಿಷತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಕ್ಕೆ ಅಡಿ ಇಡಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ಪಿ.ರಾಜೀವ್, ಪ್ರೀತಮ್ ಗೌಡ, ನಂದೀಶ್ ರೆಡ್ಡಿ ಸೇರಿದಂತೆ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.
60 ತಂಡದಿಂದ ರಾಜ್ಯ ಪ್ರವಾಸ..!
ರಾಜ್ಯದಲ್ಲಿ 60 ಬಿಜೆಪಿ ಸದಸ್ಯರ ತಂಡವೂ ಏಕಕಾಲದಲ್ಲಿ ಪ್ರವಾಸ ಕೈಗೊಳ್ಳಲಿದೆ. ಹಿರಿಯ ನಾಯಕರು ಪ್ರವಾಸದಲ್ಲಿ ಭಾಗವಹಿಸಿ,ಎಲ್ಲರ ಅಭಿಪ್ರಾಯ ಪಡೆಯಲಿದ್ದಾರೆ. ಯತ್ನಾಳ್ ವಿಚಾರದ ಕುರಿತು ಪಕ್ಷದ ಇತ್ತೀಚಿನ ಎಲ್ಲಾ ಬೆಳವಣಿಗೆ ಬಗ್ಗೆ ಚರ್ಚೆಯಾಗಿದೆ. ಸಭೆಯಲ್ಲಿ ಆದ ಚರ್ಚೆ ಬಹಿರಂಗಪಡಿಸಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಹೇಳಿದರು.