ಬಿಜೆಪಿ ರಾಜ್ಯಾಧ್ಯಕ್ಷನಾಗಿ ನ.15ಕ್ಕೆ ಅಧಿಕಾರ ಸ್ವೀಕಾರ: ಬಿ.ವೈ ವಿಜಯೇಂದ್ರ

Update: 2023-11-12 09:54 GMT

Photo - Twitter@BYVijayendra

ತುಮಕೂರು: 'ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನ.15ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು' ಎಂದು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ರವಿವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ ವಿಜಯೇಂದ್ರ ಅವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 

ನವೆಂಬರ್ 15 ರ ಬುಧವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ,ಬಸವರಾಜು ಬೊಮ್ಮಾಯಿ, ಸದಾನಂದಗೌಡರು, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ,ಗೋವಿಂದ ಕಾರಜೋಳ,ಅಶೋಕ್, ಬಸವನಗೌಡ ಪಾಟೀಲ್ ಯತ್ನಾಳ್, ವಿ. ಸೋಮಣ್ಣ ಸೇರಿದಂತೆ ಎಲ್ಲಾ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕಾರ ಮಾಡುವುದಾಗಿ ಅವರು ತಿಳಿಸಿದರು.

ರಾಜ್ಯಾಧ್ಯಕ್ಷರಾಗಿದ್ದ ನಳೀನ್‍ಕುಮಾರ್ ಕಟೀಲ್ ಅವರು ಯಶಸ್ವಿಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಕಟ್ಟಿದ್ದಾರೆ. ನಳಿನ್‍ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಅವರ ಸಲಹೆ, ಸೂಚನೆಗಳೊಂದಿಗೆ ಪಕ್ಷವನ್ನು ರಾಜ್ಯದಲ್ಲಿ ಸಂಘಟಿಸುವ ಕೆಲಸ ಮಾಡುತ್ತೇನೆ ಎಂದರು.

ನ. 16 ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲು ತೀರ್ಮಾನಿಸಲಾಗಿದೆ.ಹಾಗೆಯೇ ಶುಕ್ರವಾರದೊಳಗೆ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯನ್ನು ಸಹ ಕರೆಯಲಿದ್ದೇವೆ.ರಾಜ್ಯದ ರೈತರನ್ನು ಕಾಡುತ್ತಿರುವ ಬರಕ್ಕೆ ಯಾವ ರೀತಿ ಪರಿಹಾರ ಮಾಡಬೇಕು ಎಂಬುದರ ಬಗ್ಗೆ ಪಕ್ಷದ ಮುಖಂಡರೊಂದಿಗೆ ಕುಳಿತು ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಮಾಜಿ ಸಚಿವ ಮಾಧುಸ್ವಾಮಿ ಅವರ ಕಾಲಿಗೆ ಸಮಸ್ಯೆಯಾಗಿದೆ.ಹಾಗಾಗಿ ಅವರು ಬಂದಿಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುತ್ತೇನೆ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ವಿಜಯೇಂದ್ರ,ಕಾಂಗ್ರೆಸ್ ಪಕ್ಷದ ಮುಖಂಡರು ನಮ್ಮ ಮೇಲಿನ ಪ್ರೀತಿಯಿಂದ ಸಲಹೆ ನೀಡುತ್ತಾರೆ. ಹಿರಿಯ ಮುಖಂಡರು ನೀಡುವ ಒಳ್ಳೆಯ ಸಲಹೆಯನ್ನು ಕೇಳುವುದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸೈಡ್‍ಲೈನ್ ಮಾಡಲಾಗಿಲ್ಲಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿ ರಬಹುದು. ಎಲ್ಲವನ್ನು ಬದಿಗಿಟ್ಟು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಪ್ರಯತ್ನಿಸುತ್ತೇವೆ. ವಿರೋಧ ಪಕ್ಷ ನಾಯಕನ ಆಯ್ಕೆ ಬಳಿಕ ಕೇಂದ್ರ ನಾಯಕರನ್ನು ಭೇಟಿ ಮಾಡಿ ಮುಂದೆ ಯಾವ ರೀತಿ ನಡೆ ಇರಬೇಕು ಎಂಬ ಬಗ್ಗೆ ಸಲಹೆ ಪಡೆಯುವುದಾಗಿ ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News