ಬಿಜೆಪಿ ಟಿಕೆಟ್ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ

Update: 2023-10-20 17:06 GMT

ಬೆಂಗಳೂರು, ಅ.20: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರಕಾರಕ್ಕೆ ನೊಟೀಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಬೆಂಗಳೂರಿನ ಮ್ಯಾಜಿಸ್ಟ್ರೇಟ್, ನಗರದ ಸೆಷನ್ಸ್ ನ್ಯಾಯಾಲಯ ಈ ಎರಡು ಕೋರ್ಟ್‍ಗಳೂ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್‍ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ವಿವರ: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಅವರಿಂದ 5 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣದ ಆರೋಪಿಗಳಾದ ಚೈತ್ರಾ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಇತ್ತ ಪ್ರಕರಣದ ಆರೋಪಿ ಹಾಲಶ್ರೀ, ದೂರುದಾರರಿಂದ 1.50ಕೋಟಿ ರೂ.ಹಣ ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಸೆ.19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‍ನಲ್ಲಿ ಬಂಧಿಸಿದ್ದರು. ಇದಕ್ಕೂ ಮುನ್ನ, ಹಾಲಶ್ರೀ ಸ್ವಾಮೀಜಿ ಅವರು ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ನಿರೀಕ್ಷಣಾ ಜಾಮೀನನ್ನು ಕೋರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News