ಐಟಿ ರೈಡ್ | ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ, ಆಧಾರರಹಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-10-16 07:20 GMT

ಮೈಸೂರು, ಅ.16: ಗುತ್ತಿಗೆದಾರರ ಮನೆಯಲ್ಲಿ ಹಣ ಪತ್ತೆಯಾಗಿರುವ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾದದ್ದು. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಗುತ್ತಿಗೆದಾರರ ಮನೆಯಲ್ಲಿ ಹಣ ಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರಕಾರ ದುಡ್ಡು ವಸೂಲಿ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದಿಂದ ಯಾವುದೇ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಕಾಂಗ್ರೆಸ್ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದರು.

ಸುಳ್ಳು ಹೇಳಿಕೆ: ಕಾಂಗ್ರೆಸ್ ನಾಯಕರಿಗೆ ದುಡ್ಡು ಸಂಗ್ರಹಿಸುವ ಗುರಿ ನೀಡಿರುವುದಾಗಿ ಬಿಜೆಪಿಯ ಸಿ.ಟಿ.ರವಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಿ.ಟಿ.ರವಿಯವರ ಹೇಳಿಕೆಗಳು ಸದಾ ಸುಳ್ಳಿನಿಂದ ಕೂಡಿರುತ್ತದೆ. ಅವರ ಸುಳ್ಳು ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಈ ರೀತಿಯ ಎಲ್ಲ ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News