ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನೋಟಿಸ್: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ

Update: 2024-06-12 13:49 GMT

PC: PTI

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಇದರ ಬೆನ್ನಲ್ಲೇ ತಮ್ಮ ಮೇಲೆ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಜೂ.12ರ ಬುಧವಾರ ಸಿಐಡಿ ಅಧಿಕಾರಿಗಳ ಮುಂದೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜೂ.10ರ ಸೋಮವಾರ ಸಂಜೆ ನೋಟಿಸ್ ನೀಡಲಾಗಿತ್ತು. ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ.

ಸದ್ಯ ಹೊಸದಿಲ್ಲಿಯಲ್ಲಿರುವುದರಿಂದ ಜೂ.17ರಂದು ವಿಚಾರಣೆಗೆ ಹಾಜರಾಗುವುದಾಗಿ ವಕೀಲರ ಮೂಲಕ ಬಿ.ಎಸ್.ಯಡಿಯೂರಪ್ಪ ಉತ್ತರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಯಡಿಯೂರಪ್ಪ ವಿರುದ್ಧ ಕೇಳಿ ಬಂದಿತ್ತು.

ಫೆಬ್ರವರಿ ತಿಂಗಳಿನಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಮಾ.14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆ ಸಿಐಡಿಗೆ ವರ್ಗಾಯಿಸಲಾಗಿತ್ತು. ಇತ್ತೀಚೆಗಷ್ಟೇ ದೂರು ದಾಖಲಿಸಿದ್ದ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಹೈಕೋರ್ಟ್‍ಗೆ ಅರ್ಜಿ: ‘ತಮ್ಮ ವಿರುದ್ಧದ ದಾಖಲಾದ ಪೋಕ್ಸೋ ಪ್ರಕರಣ ಆಧಾರರಹಿತವಾಗಿದೆ. ನಾನು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ನಾಯಕರ ವಿರುದ್ಧ ದೂರು ನೀಡುವುದೇ ಹವ್ಯಾಸವಾಗಿತ್ತು. ಪ್ರಕರಣ ದಾಖಲಾದ ನಂತರ ಎ.12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ, ಧ್ವನಿ ಮಾದರಿ ಮಾತ್ರ ಸಂಗ್ರಹಿಸಿದರು.

ದೂರಿನಲ್ಲಿ ಅಪರಾಧದ ಅಂಶಗಳಿಲ್ಲ. ಆದ್ದರಿಂದ ಪ್ರಕರಣ ರದ್ದುಪಡಿಸಬೇಕು ಎಂದು ಹೈಕೋರ್ಟ್‍ಗೆ ನೀಡಿರುವ ಅರ್ಜಿಯಲ್ಲಿ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News