ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕವಾಗಿದೆ: ಸಚಿವ ಶಿವರಾಜ್ ತಂಗಡಗಿ

Update: 2024-02-16 09:42 GMT

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕ ಬಜೆಟ್ ಆಗಿದೆ. ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು.

ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷ ಉಚಿತ ಜೆಇಇ,ಎನ್ಇಇಟಿ ತರಬೇತಿ ನೀಡುವ ಯೋಜ ಘೋಷಣೆ ಮಾಡಿರುವುದು ಸ್ವಾಗತರ್ಹ ಎಂದರು.

ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನಕ್ಕೆ 'ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಆಯೋಗ ರಚನೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಲ್ಎಟಿ, ಎಂಎಟಿ ಮತ್ತು ಚಾರ್ಟೆಡ್‌ ಅಕೌಂಟೆಂಟ್ ಫೌಂಡೇಶನ್ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀಕ್ಷಾ ಪೂರ್ವ ತರಬೇತಿ ನೀಡುವ ಯೋಜನೆ ಉಪಯುಕ್ತವಾಗಿದೆ ಎಂದಿದ್ದಾರೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 100 ಸಂಖ್ಯಾಬಲದ ಮೆಟ್ರಿಕ್‌ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸುವುದು.‌ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ - ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಒದಗಿಸುವುದು ಎಂದು ಹೇಳಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ.

ಒಟ್ಟಾರೆ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ರೈತ ಪರ, ಕೃಷಿ ವಲಯ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಉದ್ಯೋಗ ಸೃಷ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ, ಬಂಡವಾಳ ಹೂಡಿಕೆ, ಮೂಲಸೌಲಭ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ, ಯುವಜನರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ.

ಇನ್ನು ಗ್ಯಾರಂಟಿಗಳು ಬಹುಕಾಲ ಇರುವುದಿಲ್ಲ ಎಂದು ಟೀಕೆ ಮಾಡುತ್ತಿದ್ದ ಬಿಜೆಪಿಗರಿಗೆ ನಮ್ಮ‌ ಸರಕಾರದ ಅಭಿವೃದ್ಧಿ ಪರ ಬಜೆಟ್ ನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರಕಾರದ ರಾಜ್ಯ ಪಾಲಿನ ತೆರಿಗೆ ಹಣ ಕೊಡದೆ ಅನ್ಯಾಯವೆಸಗುತ್ತಿರುವುದನ್ನೆಲ್ಲ ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಡುತ್ತಿದ್ದೇವೆ. ಇದನ್ನು ಸಹಿಸಲು ಸಾಧ್ಯವಾಗದ ರಾಜ್ಯ ಬಿಜೆಪಿ ನಾಯಕರು ಇಲ್ಲದ ನಾಟಕವಾಡುತ್ತಿದ್ದಾರೆ ಎಂದು ಸಚಿವ‌ ಶಿವರಾಜ್ ತಂಗಡಗಿ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News