ಚಿಕ್ಕಮಗಳೂರು ಜಿಲ್ಲೆಯಲ್ಲಿ 100 ಮೆಗಾವ್ಯಾಟ್ ಸಾಮರ್ಥ್ಯದ ಸೋಲಾರ್ ಪಾರ್ಕ್ ಗೆ ಸಂಪುಟ ಅನುಮೋದನೆ: ಸಚಿವ ಕೆ.ಜೆ.ಜಾರ್ಜ್

Update: 2023-11-01 15:50 GMT

ಚಿಕ್ಕಮಗಳೂರು, ನ.1: ಜಿಲ್ಲೆಯಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಸಂಬಂಧ 180 ಎಕರೆ ಸರಕಾರದ ಜಾಗ ಗುರುತಿಸಲಾಗಿದೆ. ಇದಕ್ಕೆ ಕ್ಯಾಬಿನೆಟ್‍ನಲ್ಲೂ ಅನುಮೋದನೆ ಸಿಕ್ಕಿದ್ದು, ಈ ಸೋಲಾರ್ ಪಾರ್ಕ್‍ನಲ್ಲಿ 100 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಚಿಕ್ಕಮಗಳೂರು ಜಿಲ್ಲೆಯ ವಿದ್ಯುತ್ ವಿತರಣೆ ಕುರಿತಂತೆ ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರ ಕೃಷಿ ಚಟುವಟಿಕೆಗಳಿಗಾಗಿ 5ಗಂಟೆಗಳ ಕಾಲ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ರಾಜ್ಯ ಸರಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಅದರಂತೆ ರೈತರಿಗೆ ನಿರಂತರವಾಗಿ 3 ಪೇಸ್ ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ಇಲಾಖಾಧಿಕಾರಿಗಳು ತಪ್ಪದೇ ಕ್ರಮಕೈಗೊಳ್ಳಬೇಕು. ನಗರ ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ಬಗ್ಗೆ ಸಮಸ್ಯೆ ಇಲ್ಲ. ಹಳ್ಳಿಗಳಲ್ಲಿ ಕೃಷಿ ಚಟುವಟಿಕೆಗಳಿಗೆ 5 ಗಂಟೆ ವಿದ್ಯುತ್ ನೀಡುವಂತೆ ಈಗಾಗಲೇ ಆದೇಶ ಹೊರಡಿಸಿದ್ದರೂ ವ್ಯಾಪಕ ದೂರುಗಳು ಬರುತ್ತಿವೆ. ಅಧಿಕಾರಿಗಳು ಸರಕಾರದ ಆದೇಶದಂತೆ 3ಪೇಸ್‍ನಲ್ಲಿ 5 ಗಂಟೆಗಳ ಕಾಲ ವಿದ್ಯುತ್ ನೀಡಬೇಕು ಎಂದು ಸೂಚಿಸಿದರು.

ಸಂಪೂರ್ಣ ವಿದ್ಯುತ್ ಕಡಿತವಾಗುತ್ತಿದೆ ಎಂದು ದೂರುಗಳು ಬಂದರು ಕೂಡ ಅಧಿಕಾರಿಗಳು ಏಕೆ ಕ್ರಮ ವಹಿಸುತ್ತಿಲ್ಲ? ಎಂದು ಪ್ರಶ್ನಿಸಿದ ಅವರು, ಅಧಿಕಾರಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿ ರೈತರಿಗೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು ಎಂದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ 180 ಎಕರೆ ಜಾಗ ಗುರುತಿಸಲಾಗಿದೆ. ಇದಕ್ಕಾಗಿ ಕ್ಯಾಬಿನೆಟ್ ಅನಮೋದನೆ ಸಿಕ್ಕಿದ್ದು, ಇಲ್ಲಿ ಸೋಲಾರ್ ಪಾರ್ಕ್ ನಿರ್ಮಾಣವಾದಲ್ಲಿ 100 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ ಎಂದ ಅವರು, ಖಾಸಗಿ ಜಮೀನು ಸಿಕ್ಕರೆ ಅದನ್ನು ಗುತ್ತಿಗೆ ಪಡೆದು ಸೋಲಾರ್ ಪಾರ್ಕ್ ನಿರ್ಮಿಸಲು ಅಧಿಕಾರಿಗಳು ಶೀಘ್ರ ಕ್ರಮವಹಿಸಬೇಕು ಎಂದರು.

ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಕಡೂರು ತಾಲೂಕಿನಲ್ಲಿ ವಿದ್ಯುತ್ ಸಂಪರ್ಕಕ್ಕಾಗಿ 8332 ಅರ್ಜಿಗಳು ಸಕ್ರಮಕ್ಕಾಗಿ ಬಂದಿವೆ. ಮೂಡಿಗೆರೆ ಹಾಗೂ ಚಿಕ್ಕಮಗಳೂರಿನಲ್ಲಿ ಅಕ್ರಮ ಸಕ್ರಮಕ್ಕೆ ಸಂಬಂಧಿಸಿದಂತೆ ದೂರುಗಳಿಲ್ಲ ಎಂದು ಮೆಸ್ಕಾಂ ಕಾರ್ಯಪಾಲಕ ಅಭಿಯಂತರರು ಸಭೆಗೆ ಮಾಹಿತಿ ನೀಡಿದರು.

ಅಕ್ರಮ ಸಕ್ರಮದಲ್ಲಿ ಸಕ್ರಮಕ್ಕಾಗಿ ಅರ್ಜಿ ಹಾಕಿರುವವರಿಗೆ 500 ಮೀಟರ್‍ಗಿಂತ ಕಡಿಮೆಯಿದ್ದರೆ ಅಂತಹವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬಹುದು. 500 ಮೀಟರ್‍ಗಿಂತ ಜಾಸ್ತಿಯಿದ್ದರೆ ಸೋಲಾರ್ ವ್ಯವಸ್ಥೆ ಕಲ್ಪಿಸಬಹುದು. ಸೋಲಾರ್ ವಿದ್ಯುತ್ ಸಂಪರ್ಕಕ್ಕಾಗಿ ಸರಕಾರ ಶೇ.80ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ ಹೇಳಿದರು.

ಅಧಿಕಾರಿಗಳು ಯಾವ ಸಮಯಕ್ಕೆ ವಿದ್ಯುತ್ ಕಡಿತಗೊಳಿತವಾಗುತ್ತದೆ ಎಂಬ ಬಗ್ಗೆ ಮೆಸ್ಕಾಂ ಅಧಿಕಾರಿಗಳು ವಾಟ್ಸ್ ಆಪ್ ಹಾಗೂ ಎಸ್ ಎಂ ಎಸ್ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರಿಂದ ಇಲಾಖೆಗೆ ಒಳ್ಳೆಯ ಹೆಸರು ಬರುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ದೂರುಗಳು ಬಂದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕೈಗೊಳ್ಳಲಾಗುವುದು ಎಂದು ಇದೇ ವೇಳೆ ಎಚ್ಚರಿಸಿದರು.

ಸಭೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಡಿ.ತಮ್ಮಯ್ಯ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಸಚಿವರ ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್ ಹಾಗೂ ಇಂಧನ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News