ಕೋವಿಡ್ ಹಗರಣ : ಎಸ್‍ಐಟಿ, ಸಂಪುಟ ಉಪ ಸಮಿತಿ ರಚಿಸಲು ತೀರ್ಮಾನ
ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್‌ಐಟಿ) ರಚನೆ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಐಟಿ ಜೊತೆಗೆ ಸಚಿವ ಸಂಪುಟ ಉಪ ಸಮಿತಿಯೊಂದನ್ನು ರಚನೆ ಮಾಡಲಾಗುವುದು ಎಂದು ಹೇಳಿದರು.
ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾ.ಮೈಕಲ್ ಡಿ.ಕುನ್ಹಾ ಅವರ ವಿಚಾರಣಾ ಆಯೋಗ ಸರಕಾರಕ್ಕೆ ಮಧ್ಯಂತರ ವರದಿ ನೀಡಿದೆ. ಅದರ ಆಧಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ. ಪ್ರಮುಖವಾಗಿ ಇದರಲ್ಲಿ ಕ್ರಿಮಿನಲ್ ಅಂಶಗಳು ಇರುವ ಹಿನ್ನೆಲೆಯಲ್ಲಿ ಎಸ್‌ಐಟಿ ರಚನೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ವಿಚಾರಣಾ ಆಯೋಗವು 11 ಸಂಪುಟಗಳಲ್ಲಿ ವರದಿ ನೀಡಿದೆ. 7223.64 ಕೋಟಿ ರೂ.ಮೊತ್ತದ ಅವ್ಯವಹಾರ ಆಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಲ್ಲದೆ, 500 ಕೋಟಿ ರೂ.ಗಳನ್ನು ಸಂಬಂಧಪಟ್ಟವರಿಂದ ವಸೂಲು ಮಾಡುವಂತೆ ಶಿಫಾರಸ್ಸು ಮಾಡಿದೆ. ಅದರಂತೆ, ಸಂಬಂಧಪಟ್ಟವರಿಂದ ಹಣ ವಸೂಲು ಮಾಡುವ ಪ್ರಕ್ರಿಯೆಯನ್ನು ತಕ್ಷಣ ಪ್ರಾರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಎಂಟು ವಲಯಗಳಿದ್ದು, ಅದರಲ್ಲಿ ನಾಲ್ಕು ವಲಯಗಳಿಂದ ಮಾಹಿತಿ ಬಂದಿಲ್ಲ. ರಾಜ್ಯದ 31 ಜಿಲ್ಲೆಗಳ ವರದಿ ಬರುವುದು ಬಾಕಿಯಿದೆ. ಸಂಗ್ರಹ ಬಾಕಿ ಇದೆ. 50 ಸಾವಿರಕ್ಕೂ ಹೆಚ್ಚು ಕಡತಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಪಡೆದು ಪರಿಶೀಲಿಸಿ ವಿಚಾರಣಾ ಆಯೋಗ ವರದಿ ನೀಡಿದೆ. ಈ ಹಗರಣದಲ್ಲಿ ಶಾಮೀಲಾಗಿರುವ ಕಂಪೆನಿಗಳು, ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಹಗರಣದಲ್ಲಿ ಯಾರ ಪಾತ್ರ ಏನು ಎಂಬುದು ಎಸ್‌ಐಟಿ ತನಿಖೆಯಲ್ಲಿ ಬೆಳಕಿಗೆ ಬರಲಿದೆ. ವಿಚಾರಣಾ ಆಯೋಗದ ಪೂರ್ಣ ವರದಿ ಬಂದ ಬಳಿಕ ಏನೇನು ಅವ್ಯವಹಾರ ಆಗಿದೆ, ಯಾರೆಲ್ಲ ಇದರಲ್ಲಿ ಶಾಮೀಲಾಗಿದ್ದಾರೆ ಎಂಬುದೆಲ್ಲ ಗೊತ್ತಾಗುತ್ತದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.