ಹೆಚ್ಚುವರಿ ಇಂದಿರಾ ಕ್ಯಾಂಟೀನ್, ʼಹೊಂಬೆಳಕುʼ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ

Update: 2024-08-22 15:28 GMT

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುವರಿ ಇಂದಿರಾ ಕ್ಯಾಂಟೀನ್ ನಿರ್ಮಾಣ, ಹೊಂಬೆಳಕು ಯೋಜನೆಯಡಿ 200 ಗ್ರಾಮಗಳಲ್ಲಿ ಸೋಲಾರ್ ಬೀದಿ ದೀಪ ಅಳವಡಿಕೆ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ್, ಬೆಂಗಳೂರಿನಲ್ಲಿ ನೂತನವಾಗಿ 52 ಇಂದಿರಾ ಕ್ಯಾಂಟೀನ್‍ಗಳನ್ನು ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಪ್ರತಿ ಇಂದಿರಾ ಕ್ಯಾಂಟೀನ್‍ಗೆ 40 ಲಕ್ಷಗಳಂತೆ ಒಟ್ಟು ಯೋಜನಾ ವೆಚ್ಚ 20 ಕೋಟಿ ರೂ. ಇರಲಿದೆ ಎಂದರು.

ಲಭ್ಯವಿರುವ ನಿವೇಶಗಳಲ್ಲಿ ಪ್ರತಿ ಅಂಗನವಾಡಿ ಕೇಂದ್ರಕ್ಕೆ 20 ಲಕ್ಷ ರೂಪಾಯಿಗಳಂತೆ ಖರ್ಚು ಮಾಡಿ 592 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗುವುದು ಹಾಗೂ ಅಂಗನವಾಡಿ ಕಟ್ಟಡಗಳ ಅವಶ್ಯಕತೆಗೆ ಅನುಸಾರವಾಗಿ ಟೈಪ್ ಡಿಸೈನ್ ಮತ್ತು ಘಟಕ ವೆಚ್ಚ ಪರಿಷ್ಕರಣೆ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಅಧಿಕಾರ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದರು.

ರಾಜ್ಯದಲ್ಲಿ ಆಯ್ಷ್ಮಾನ್ ಭಾರತ್ ಡಿಜಿಟಲ್ ಹೆಲ್ತ್ ಮಿಷನ್ ಹಾಗೂ ಆರೋಗ್ಯ ಇಲಾಖೆಯ ಇತರೆ ಎಲ್ಲಾ ಆರೋಗ್ಯ ಸಂಬಂಧಿತ ಡಿಜಿಟಲ್ ಉಪಕ್ರಮಗಳ ಅನುಷ್ಠಾನದ ಉದ್ದೇಶಕ್ಕಾಗಿ ಕರ್ನಾಟಕ ಸೊಸೈಟಿಗಳ ನೋಂದಣಿ ಕಾಯ್ದೆ 1960ರ ಅಡಿಯಲ್ಲಿ ಕರ್ನಾಟಕ ಡಿಜಿಟಲ್ ಹೆಲ್ತ್ ಸೊಸೈಟಿ ಸ್ಥಾಪಿಸಿ ನೋಂದಣಿ ಮಾಡಲು ತೀರ್ಮಾನಿಸಲಾಗಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಚಿಕ್ಕಲಪರ್ವಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್‍ನ್ನು 397.50 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದೂ ಅವರು ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News