ಎಚ್‍ಡಿಕೆ, ಬಿ.ಎನ್.ಚಂದ್ರಪ್ಪ, ಕಾರಜೋಳ, ಡಾ.ಮಂಜುನಾಥ್ ಸಹಿತ ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ: ನಾಳೆ(ಎ.5) ನಾಮಪತ್ರ ಪರಿಶೀಲನೆ

Update: 2024-04-04 16:06 GMT

ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಇಂದು, ಮಂಡ್ಯದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ, ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್, ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು, ಚಿತ್ರದುರ್ಗದಲ್ಲಿ ಬಿಜೆಪಿಯ ಗೋವಿಂದ ಎಂ.ಕಾರಜೋಳ, ಕಾಂಗ್ರೆಸ್‍ನ ಬಿ.ಎನ್.ಚಂದ್ರಪ್ಪ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯ ಡಾ.ಸಿ.ಎನ್.ಮಂಜುನಾಥ್ ಸೇರಿದಂತೆ ಘಟಾನುಘಟಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದರು.

ನಾಳೆ(ಎ.5) ನಾಮಪತ್ರ ಪರಿಶೀಲನೆ ನಡೆಯಲಿದ್ದು, ಎ.8ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಎ.26ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಇನ್ನೂ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಶುರುವಾಗಲಿದೆ. ನೂರಕ್ಕೂ ಹೆಚ್ಚು ಮಂದಿ ಪಕ್ಷೇತರರು ಸೇರಿದಂತೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ದಿಗ್ಗಜರು ನಾಮಪತ್ರ ಸಲ್ಲಿಕೆ ಮಾಡಿದ್ದು ಅದೃಷ್ಟ ಪರೀಕ್ಷೆಗೆ ಅಣಿಯಾಗಿದ್ದಾರೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ(ಎಸ್‍ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ(ಎಸ್‍ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಸಹಿತ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.

ಬಹುತೇಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ತಮ್ಮ ನೆಚ್ಚಿನ ನಾಯಕರು ಹಾಗೂ ಬೆಂಬಲಿಗರೊಂದಿಗೆ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಅದ್ದೂರಿ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿ ನಾಮಪತ್ರ ಸಲ್ಲಿಕೆ ಮಾಡಿದರು. ಈಗಾಗಲೇ ನಾಮಪತ್ರ ಸಲ್ಲಿಸಿದ್ದ ಕೆಲ ಅಭ್ಯರ್ಥಿಗಳು ಅಬ್ಬರದ ರೋಡ್ ಶೋ ನಡೆಸಿ, ಶಕ್ತಿ ಪ್ರದರ್ಶನ ಮಾಡಿ ಮತ್ತೊಮ್ಮೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಮಂಡ್ಯ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ವೇಳೆ ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಿಎಂ ಯಡಿಯೂರಪ್ಪ, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸೇರಿದಂತೆ ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರು ಸಾಥ್ ನೀಡಿದರು.

ಇತ್ತ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಮಂಜುನಾಥ್, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ, ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ಚಿತ್ರದುರ್ಗ ಕ್ಷೇತ್ರದಿಂದ ಗೋವಿಂದ ಎಂ.ಕಾರಜೋಳ, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸಿದರು.

ಈಗಾಗಲೇ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದ ಜೆಡಿಎಸ್-ಬಿಜೆಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News