ಜಾತಿ ನಿಂದನೆ ಆರೋಪ: ನಟ ಉಪೇಂದ್ರ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್‌ ತಡೆ

Update: 2023-08-14 12:43 GMT

ಬೆಂಗಳೂರು, ಆ.14: ‘ಎಸ್‍ಸಿ ಮತ್ತು ಎಸ್‍ಟಿ ಸಮುದಾಯದವರಿಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು(ಸಿ.ಕೆ.ಅಚ್ಚುಕಟ್ಟು) ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‍ಐಆರ್‍ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಂಗಳೂರಿನ ದಕ್ಷಿಣ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ನೀಡಿರುವ ದೂರು ಆಧರಿಸಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಎಸ್‍ಸಿ ಮತ್ತು ಎಸ್‍ಟಿ(ದೌರ್ಜನ್ಯ ನಿಷೇಧ) ಕಾಯಿದೆ ಸೆಕ್ಷನ್ 3(1)(ಆರ್)(ಎಸ್) ಅಡಿ ದಾಖಲಿಸಿದ್ದ ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ಉಪೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‍ಗೌಡರ್ ನೇತೃತ್ವದ ಪೀಠವು ಈ ಆದೇಶ ನೀಡಿದೆ.

ಉಪೇಂದ್ರ ಅವರ ವಿರುದ್ಧ ದಾಖಲಾಗಿರುವ ಎಫ್‍ಐಆರ್ ಮತ್ತು ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಹಾಯಕ ಪೊಲೀಸ್ ಆಯುಕ್ತರು ನೀಡಿದ್ದ ನೋಟಿಸ್‍ಗೆ ಮಧ್ಯಂತರ ತಡೆ ವಿಧಿಸಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಲಾಗಿದ್ದು, ವಿಚಾರಣೆಯನ್ನು ಸೆ.13ಕ್ಕೆ ಮುಂದೂಡಿದೆ.

ನಾನು ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಆ ಗಾದೆ ಬಳಸಲಾಗಿದೆ. ಆಕ್ಷೇಪ ವ್ಯಕ್ತವಾದ ಕೂಡಲೇ ವಿಡಿಯೋ ಡಿಲೀಟ್ ಮಾಡಿ ಕ್ಷಮೆ ಕೋರಿದ್ದೇನೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ ಎಂದು ಉಪೇಂದ್ರ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.

ಘಟನೆ ವಿವರ: 

ನಟ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಮಾತನಾಡುತ್ತಾ, ‘ಊರು ಎಂದ ಮೇಲೆ ಹೊಲಗೇರಿ ಇರುತ್ತದೆ’ ಎಂಬ ಹೇಳಿಕೆ ನೀಡಿದ್ದರು. ಇದು ದಲಿತ ಸಮಾಜದ ಜಾತಿ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ. ಆದ್ದರಿಂದ ಉಪೇಂದ್ರ ವಿರುದ್ಧ ದೌರ್ಜನ್ಯ ಕಾಯ್ದೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಮಧುಸೂದನ್ ದೂರಿನಲ್ಲಿ ಪೊಲೀಸ್ ದೂರಿನಲ್ಲಿ ಒತ್ತಾಯಿಸಿದ್ದರು. ಅದರಂತೆ ಉಪೇಂದ್ರ ವಿರುದ್ಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆ ಹಾಗೂ ಹಲಸೂರು ಗೇಟ್‌ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News