ಕಾವೇರಿ ನದಿ ನೀರಿನ ಮಾಲಿನ್ಯ | ವರದಿ ನೀಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ

Update: 2024-06-25 13:10 GMT

ಬೆಂಗಳೂರು : ಕಾವೇರಿ ನದಿಗೆ ನೀರಿನ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳಬೇಕೆಂಬ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರ ಮನವಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರಿಂದ ಸ್ಪಂದನೆ ಸಿಕ್ಕಿದೆ.

ಈ ಸಂಬಂಧ ಪ್ರಕಟಣೆ ನೀಡಿರುವ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ‘ಕಾವೇರಿ ನದಿಗೆ ತ್ಯಾಜ್ಯ ನೀರು ಬಿಡುವ ದೂರಿನ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಅದನ್ನು ತಡೆಯಲು ಸ್ಥಳೀಯ ಪ್ರಾಧಿಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿ ವರದಿ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ’ ಎಂದು ತಿಳಿಸಿದ್ದಾರೆ.

‘ನದಿ ನೀರು ಮಲೀನಗೊಳ್ಳದಂತೆ ತಡೆಯಲು ಸೂಕ್ತಕ್ರಮ ಕೈಗೊಳ್ಳುವಂತೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಲಿಖಿತವಾಗಿ ಆದೇಶಿಸಿದ್ದಾರೆ. ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಸಮಿತಿ ರಚಿಸಿ ಎರಡು ವಾರದಲ್ಲಿ ವಿವರವಾದ ವರದಿ ಸಲ್ಲಿಸಲು ಕ್ರಮಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

‘ಈ ಸಂಬಂಧ ತ್ಯಾಜ್ಯ ಮಿಶ್ರಿತ ನೀರು ತಡೆಗೆ ಕ್ರಮವಹಿಸಿ ತನಿಖಾ ತಂಡ ರಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದೆ. ಇದೀಗ ಆ ಮನವಿಗೆ ಸರಕಾರ ಸ್ಪಂದಿಸುವ ಮೂಲಕ ಮಾಲಿನ್ಯಗೊಳ್ಳುತ್ತಿರುವ ನದಿಯ ಶುದ್ಧೀಕರಣಕ್ಕೆ ಕಾರ್ಯಪ್ರವೃತ್ತವಾಗಿದೆ ಎಂದು ದಿನೇಶ್ ಗೂಳಿಗೌಡ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News