ಎ.18,19 ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ : 737 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವ 3.49 ಲಕ್ಷ ವಿದ್ಯಾರ್ಥಿಗಳು
ಬೆಂಗಳೂರು : ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಿರ್ಣಾಯಕವಾದ ಸಿಇಟಿ ಪರೀಕ್ಷೆ ರಾಜ್ಯದಾದ್ಯಂತ ಎ.18 ಮತ್ತು ಎ.19 ನಡೆಯಲಿದೆ. ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನಲ್ಲೇ ಗರಿಷ್ಠ 167 ಪರೀಕ್ಷಾ ಕೇಂದ್ರಗಳಿವೆ.
ಈ ಬಾರಿ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. 648 ವಿಶೇಷಚೇತನ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಇರಲಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾ ಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ಎ.18ರಂದು ಗುರುವಾರ ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ ಮತ್ತು ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಹಾಗೂ ಎ.19 ಶುಕ್ರವಾರ ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳಿಗೆ ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಹಾಜರಿರಬೇಕು. ಬೆಳಿಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುವುದಿಲ್ಲ.
ಒಂದು ಪರೀಕ್ಷಾ ಕೊಠಡಿಯಲ್ಲಿ 16 ಆವೃತ್ತಿಗಳ ಪ್ರಶ್ನೆ ಪತ್ರಿಕೆಗಳು ಇರಲಿದ್ದು, ನಕಲು ಮಾಡಲು ಅವಕಾಶ ಆಗದಂತೆ ಯೋಜನೆ ರೂಪಿಸಲಾಗಿದೆ. ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಒಂದು ವೇಳೆ ಅಭ್ಯರ್ಥಿಗಳಿಗೆ ಏನಾದರೂ ಗೊಂದಲ ಉಂಟಾದಲ್ಲಿ ಇಂಗ್ಲಿಷ್ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪ್ರಶ್ನೆಗಳಿಗೆ ಅವಕಾಶ ಇರುವುದಿಲ್ಲ.
ಬೇಸಿಗೆಯ ಝಳ ಇರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು, ಎನ್ಸಿಸಿ ಮತ್ತು ಎನ್ಎಸ್ಎಸ್ ಕೆಡೆಟ್ಗಳು ಪರೀಕ್ಷೆಯು ಸುಗಮವಾಗಿ ನಡೆಯಲು ಸಹಕರಿಸಲಿದ್ದಾರೆ.
ಎ.20ರಂದು ಹೊರನಾಡು ಕನ್ನಡಿಗರಿಗೆ ಪರೀಕ್ಷೆ: ಎ.20ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಬೆಳಿಗ್ಗೆ 11.30ರಿಂದ 12.30ರವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಸಲ ಒಟ್ಟು 1,545 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾರ್ಥಿಗಳಿಗೆ ಸೂಚನೆಗಳು: ಪರೀಕ್ಷೆಗೆ ಪ್ರವೇಶಪತ್ರದೊಂದಿಗೆ ಗುರುತಿನ ಪತ್ರವನ್ನು ತರುವುದು ಕಡ್ಡಾಯವಾಗಿದೆ. ನೀಲಿ ಅಥವಾ ಕಪ್ಪು ಬಣ್ಣದ ಪೆನ್ ಅನ್ನು ಮಾತ್ರ ಬಳಸಬೇಕು. ತುಂಬುದೋಳಿನ ಅಂಗಿ ಧರಿಸಿಕೊಂಡು ಪರೀಕ್ಷೆಗೆ ಬರುವಂತಿಲ್ಲ. ಮಾಸ್ಕ್ ಹಾಕುವಂತಿಲ್ಲ. ಆಭರಣಗಳನ್ನು ಕೂಡ ಹಾಕಿಕೊಂಡು ಬರುವಂತಿಲ್ಲ. ಮೊಬೈಲ್, ಬ್ಲೂಟೂತ್, ಟ್ಯಾಬ್ಲೆಟ್, ಕೈಗಡಿಯಾರ, ಕ್ಯಾಲುಕುಲೇಟರ್, ನೋಟ್ ಪ್ಯಾಡ್, ಐ-ಪಾಡ್, ಇಯರ್ ಫೋನ್ ಇತ್ಯಾದಿಗಳನ್ನು ತರುವಂತಿಲ್ಲ.
ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ. ಓಎಂಆರ್ ಶೀಟ್ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್ ಕೋಡ್ ನಮೂದಿಸುವುದು ಕಡ್ಡಾಯವಾಗಿದೆ. ಓಎಂಆರ್ ಶೀಟ್ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು. ಓಎಂಆರ್ ಶೀಟ್ನಲ್ಲಿರುವ ಟೈಮಿಂಗ್ ಮಾರ್ಕ್ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ.