ಕಾಂಗ್ರೆಸ್ಸಿನ ದಲಿತ ಮುಖಂಡರು, ಜನಪ್ರತಿನಿಧಿಗಳು ರಾಜೀನಾಮೆ ನೀಡಿ : ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು : ದಲಿತರ ವಿರುದ್ಧ ಕಾಂಗ್ರೆಸ್ ಪಕ್ಷದ ಅನ್ಯಾಯವನ್ನು ಪ್ರತಿಭಟಿಸಿ, ಕಾಂಗ್ರೆಸ್ಸಿನಲ್ಲಿರುವ ದಲಿತ ಮುಖಂಡರು, ಜನಪ್ರತಿನಿಧಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು(ಗುರುವಾರ) ನಡೆದ ಬಿಜೆಪಿಯ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲ ದಲಿತ ಮುಖಂಡರಿಗೂ ಧಿಕ್ಕಾರವಿರಲಿ. ದಲಿತರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ನಾನು ಹಿಂದುಳಿದ ವರ್ಗದ ನಾಯಕ. ಆದ್ದರಿಂದಲೇ ನನಗೆ ಬಿಜೆಪಿಯವರು ತೊಂದರೆ ಕೊಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಈ ದೇಶದ ಪ್ರಧಾನಮಂತ್ರಿ ಯಾರು? ಅವರು ಕೂಡ ಹಿಂದುಳಿದವರು. ಅವರು ನಿಮ್ಮ ಥರ ಕರಿಕಾಗೆ ಅಲ್ಲ. ಅವರು ಕಳಂಕವೇ ಇಲ್ಲದವರು ಎಂದು ವಿವರಿಸಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ ಎಂದು ಪ್ರಕಟಿಸಿದ ಅವರು, ಭ್ರಷ್ಟಾಚಾರದ ಕಪ್ಪನ್ನು ಅಳಿಸುವವರೆಗೆ, ನಿಮ್ಮನ್ನು ಮನೆಗೆ ಕಳಿಸುವವರೆಗೆ ನಾವು ವಿರಮಿಸುವುದಿಲ್ಲ. ನಾವು ಹೋರಾಟದಿಂದ ವಿರಮಿಸುವುದಿಲ್ಲ ಎಂದು ತಿಳಿಸಿದರು.
ಜನಹಿತಕ್ಕಾಗಿ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ :
ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಮಾತನಾಡಿ, ಜನಹಿತ, ರಾಜ್ಯದ ಹಿತ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಲೂಟಿ ಹೊಡೆಯುವುದೇ ಕಾಂಗ್ರೆಸ್ ಸರಕಾರದ ನೀತಿಯಾಗಿದೆ ಎಂದು ಟೀಕಿಸಿದ ಅವರು, ಸಾಕ್ಷಿ ಸಮೇತ ಹಿಡಿದರೂ ಇವರು ರಾಜೀನಾಮೆ ಕೊಡುವುದಿಲ್ಲ. ಜನರ ಭಾವನೆಯನ್ನು ಇವರು ಗೌರವಿಸುವುದಿಲ್ಲ. ಕುರ್ಚಿಗೆ ಅಂಟಿಕೊಂಡೇ ಇರುವ ಭಂಡತನ ಇವರದು ಎಂದು ಟೀಕಿಸಿದರು.
ಸಿಬಿಐಗೆ ಕೊಡಬೇಕು :
ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಮಾತನಾಡಿ, ಸಿದ್ದರಾಮಯ್ಯನವರಿಗೆ ಧಮ್ಮಿದ್ದರೆ, ತಾಕತ್ತಿದ್ದರೆ ಹಗರಣಗಳ ತನಿಖೆಯನ್ನು ಸಿಬಿಐಗೆ ಕೊಡಬೇಕು. ವೈಟ್ನರ್ ಹಚ್ಚಿದ್ದು ತಮ್ಮ ಸರಕಾರದ ಅವಧಿಯಲ್ಲಿ ಅಲ್ಲ ಎಂದು ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಪ್ರಮಾಣ ಮಾಡಿ ಹೇಳಬೇಕು ಎಂದು ಸಿದ್ದರಾಮಯ್ಯನವರಿಗೆ ಸವಾಲು ಹಾಕಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಮುನಿರತ್ನ, ಗೋಪಾಲಯ್ಯ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಬೆಂಗಳೂರಿನ ಶಾಸಕರು, ವಿಧಾನಪರಿಷತ್ ಸದಸ್ಯರು, ವಿಧಾನಪರಿಷತ್ ಮಾಜಿ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.