ಆ.23ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿಗೆ | ಹೈಕಮಾಂಡ್‌ ಜೊತೆ ʼಮುಡಾʼ ಚರ್ಚೆ?

Update: 2024-08-18 15:24 GMT

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅನುಮತಿ ನೀಡಿದ ಬೆನ್ನಲ್ಲೆ ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ ಹೋರಾಟಕ್ಕೆ ಬೀದಿಗಿಳಿಯುವ ಘೋಷಣೆ ಮಾಡಿದೆ. ಈ ಮಧ್ಯೆ ಪ್ರತಿಪಕ್ಷ ಬಿಜೆಪಿಯೂ ಪ್ರತಿಭಟನೆಗೆ ಮುಂದಾಗಿದೆ.

ಮತ್ತೊಂದೆಡೆ ‘ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ, ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ನಾಳೆ(ಆ.19) ಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸುವ ಸಾಧ್ಯತೆಗಳಿದ್ದು, ಈ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆ.23ಕ್ಕೆ ಹೊಸದಿಲ್ಲಿ ಪ್ರವಾಸ ಕೈಗೊಂಡಿರುವುದು ಕುತೂಹಲ ಸೃಷ್ಟಿಸಿದೆ.

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣ ಸಂಬಂಧ ಸಿಎಂ ವಿರುದ್ಧ ತನಿಖೆಗೆ ರಾಜ್ಯಪಾಲರು ಆದೇಶ ನೀಡಿದ್ದು, ಆ.23ರಂದು ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ, ಹೈಕಮಾಂಡ್ ನಾಯಕರೊಂದಿಗೆ ಮುಂದಿನ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಆ.22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಭೆಯಲ್ಲಿನ ರಾಜಕಾರಣ ಬೆಳವಣಿಗಳ ಬಗ್ಗೆ ವರಿಷ್ಠರ ಜತೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಎಲ್ಲ ಶಾಸಕರು ತಮ್ಮ ಬೆಂಬಲಕ್ಕಿರುವಂತೆ ಮನವಿ ಮಾಡಲಿದ್ದಾರೆ. ರಾಜ್ಯಪಾಲರ ಆದೇಶಕ್ಕೆ ತಡೆ ನೀಡುವಂತೆ ಹೈಕೋರ್ಟ್ ಅರ್ಜಿ ಸಲ್ಲಿಸಲಿದ್ದಾರೆ. ಒಂದು ವೇಳೆ ಹೈಕೋರ್ಟ್ ನಿರಾಕರಿಸಿದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News