ಉಪ ಚುನಾವಣೆ | ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಶಾಸಕರಿಗೆ ಸಿಎಂ, ಡಿಸಿಎಂ ಸೂಚನೆ

Update: 2024-10-27 13:36 GMT

ಬೆಂಗಳೂರು : ಉಪ ಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವಂತೆ ಎಲ್ಲ ಶಾಸಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ರವಿವಾರ ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ಉಪ ಚುನಾವಣೆ ಸಂಬಂಧ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಮುಖಂಡರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉಭಯ ನಾಯಕರು ಸಂವಾದ ನಡೆಸಿದರು.

ರಾಜ್ಯದಲ್ಲಿ ನಮ್ಮ ಪಕ್ಷದ ಸರಕಾರವಿದ್ದು, ಈ ಉಪ ಚುನಾವಣೆಯಲ್ಲಿ ಎಲ್ಲ ಮೂರು ಕ್ಷೇತ್ರಗಳನ್ನು ಗೆಲ್ಲಲೇಬೇಕಿದೆ. ಅದಕ್ಕೆ ಪೂರಕವಾದ ವಾತಾವರಣವು ಇದೆ. ಸರಕಾರದ ಐದು ಗ್ಯಾರಂಟಿಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಿ, ಅದಲ್ಲದೆ, ನಾವು ತಂದಿರುವ ಯೋಜನೆಗಳ ಬಗ್ಗೆಯೂ ಜನರಿಗೆ ಮನವರಿಕೆ ಮಾಡಿಕೊಡಿ ಎಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ತಿಳಿಸಿದರು.

ಸ್ಥಳೀಯ ಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಬಗೆಯ ಭಿನ್ನಮತ, ಅಸಮಾಧಾನ ಇದ್ದರೆ ಅದನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಯೊಬ್ಬ ಮತದಾರನಿಗೂ ನಮ್ಮ ಕಾರ್ಯಕ್ರಮಗಳ ಮಾಹಿತಿ ತಲುಪುವಂತೆ ಪ್ರಚಾರ ರೂಪಿಸಬೇಕು ಎಂದು ಅವರು ಸೂಚಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ಸರಕಾರದ ವಿರುದ್ಧ ಯಾವುದೇ ಆರೋಪ ಮಾಡಿದರೂ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕು. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸೇರಿದಂತೆ ಯಾವುದೇ ವಿಚಾರವನ್ನು ವಿಪಕ್ಷಗಳು ಪ್ರಸ್ತಾಪ ಮಾಡಿದರೂ ಅದಕ್ಕೆ ತಿರುಗೇಟು ನೀಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಿಗೂ ಶಾಸಕರು, ಸಂಸದರು ಜವಾಬ್ದಾರಿ ನೀಡಲಾಗಿದೆ. ಪ್ರತಿಯೊಂದು ಹೋಬಳಿಗೆ ಒಬ್ಬ ಸಚಿವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಾಸಕರು, ಸಂಸದರು ಹೋಗಿ ಮತಯಾಚನೆ ಮಾಡುವ ನಿಟ್ಟಿನಲ್ಲಿ ಜವಾಬ್ದಾರಿಯನ್ನು ವಹಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಈ ಮೂರು ಕ್ಷೇತ್ರಗಳಲ್ಲೂ ಗೆಲ್ಲುವಂತೆ ನಾವು ಪಣತೊಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಕರೆ ನೀಡಿದರು.

ಸುರ್ಜೇವಾಲ ಅಸಮಾಧಾನ: ಹೊಸದಿಲ್ಲಿಯಿಂದ ವಿಡಿಯೋ ಕಾನ್ಫರೆನ್ಸ್‌ ನಲ್ಲಿ ಭಾಗವಹಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಈ ಮಹತ್ವದ ಸಭೆಯಲ್ಲಿ ಕೆಲವು ಸಚಿವರು ಪಾಲ್ಗೊಳ್ಳದಿರುವುದಕ್ಕೆ ಅಸಮಾಧಾನ ಹೊರ ಹಾಕಿದರು. ಈ ಮೂರು ಕ್ಷೇತ್ರಗಳ ಉಪ ಚುನಾವಣೆ ಸರಕಾರ ಹಾಗೂ ಪಕ್ಷಕ್ಕೆ ಪ್ರಮುಖವಾಗಿದೆ. ಆದುದರಿಂದ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ, ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News