ಮಹಿಳಾ ಸ್ವಸಹಾಯ ಸಂಘಗಳ ಮೂಲಕ ʼಇಂದಿರಾ ಕ್ಯಾಂಟೀನ್ʼ ನಿರ್ವಹಣೆ : ಪ್ರಸ್ತಾವ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

Update: 2025-01-09 14:32 GMT

ಬೆಂಗಳೂರು : ರಾಜ್ಯದಲ್ಲಿ ಆರಂಭಿಸಲಾಗಿರುವ ‘ಅಕ್ಕ ಕಾಫಿ’ ಘಟಕಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟೀನ್‍ಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಅವರು ನಡೆಸಿದರು.

ಆರ್ಥಿಕ ಚಟುವಟಿಕೆಗಳಲ್ಲಿ ಗ್ರಾಮೀಣ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕು. ಕೌಶಲ್ಯಾಭಿವೃದ್ಧಿ ಆದರೆ ಮಾತ್ರ ಉದ್ಯೋಗ ಸಿಗಲು ಸಾಧ್ಯವಿದೆ. ಕೌಶಲ್ಯ ನೀಡಿಕೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಪ್ರಸಕ್ತ ಬಜೆಟ್‍ನಲ್ಲಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗೆ 1864 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ 1235 ಕೋಟಿ ರೂ. ವೆಚ್ಚವಾಗಿದೆ. ರಾಜ್ಯದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ ಸಂಸ್ಥೆಗಳೆಂದು ಘೋಷಿಸಿ ಉನ್ನತೀಕರಣಕ್ಕಾಗಿ 100 ಕೋಟಿ ರೂ. ಒದಗಿಸಲಾಗಿದ್ದು, ಈ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಬೇಕು. ಯುವನಿಧಿ ಯೋಜನೆಯಡಿ ಇದುವರೆಗೆ 1,97,060 ಅಭ್ಯರ್ಥಿಗಳು ನೋಂದಾಯಿಸಿದ್ದು, ಇವರ ಪೈಕಿ 1,61,883 ಅರ್ಹ ಫಲಾನುಭವಿಗಳಿಗೆ 216.38 ಕೋಟಿ ರೂ. ನಿರುದ್ಯೋಗ ಭತ್ತೆ ನೀಡಲಾಗಿದೆ. ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿದ್ದ, ಸುಮಾರು 20 ಸಾವಿರ ಐಟಿಐ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ಸಂವಹನ(ಕಮ್ಯುನಿಕೇಶನ್) ಕೌಶಲ್ಯ ತರಬೇತಿ ನೀಡುವ ಕಾರ್ಯಕ್ರಮವನ್ನು ಆದಷ್ಟು ಬೇಗನೆ ಅನುಷ್ಠಾನಗೊಳಿಸಬೇಕು. ಐಟಿಐ ಪ್ರವೇಶಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಮುಂದಿನ ಉದ್ಯೋಗ ಮೇಳವನ್ನು ಮೈಸೂರಿನಲ್ಲಿ ಆಯೋಜಿಸಲು ಸೂಚಿಸಿದ ಮುಖ್ಯಮಂತ್ರಿ, ಗುಲ್ಬರ್ಗ ಹಾಗೂ ಹುಬ್ಬಳ್ಳಿಯಲ್ಲೂ ಉದ್ಯೋಗ ಮೇಳ ಆಯೋಜಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News