ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಬೆಂಗಳೂರು, ಆ.30: ಬಿಬಿಎಂಪಿ ಕಚೇರಿ ಆವರಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಮೃತಪಟ್ಟಿದ್ದು, ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ʼʼಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ ಶಿವಕುಮಾರ್ ಅವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆʼʼ ಎಂದು ತಿಳಿಸಿದ್ದಾರೆ.
ಶಿವಕುಮಾರ್ ಅವರು ಗುಣ ನಿಯಂತ್ರಣ ವಿಭಾಗದದಲ್ಲಿ ಮುಖ್ಯ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಕಿ ಅವಘಡದ ವೇಳೆ ಎಲ್ಲರನ್ನೂ ರಕ್ಷಿಸುವಾಗ ವಿಷಾನಿಲ ದೇಹದ ಶ್ವಾಸಕೋಶಕ್ಕೆ ಹೊಕ್ಕಿದ ಪರಿಣಾಮ ತೀವ್ರ ತೊಂದರೆಗೆ ಒಳಗಾಗಿ ಆಸ್ಪತ್ರೆ ಸೇರಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಕೊನೆಯುಸಿರೆಳೆದಿದ್ದಾರೆ.