ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್
ಬೆಂಗಳೂರು, ಆ. 20: ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.
ರವಿವಾರ ಇಲ್ಲಿನ ಕುಮಾರ ಪಾರ್ಕ್‍ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವ ಸೋಮಶೇಖರ್, ‘ಯಶವಂತಪುರ ಕ್ಷೇತ್ರದ ಕೆಂಗೇರಿ ಹೋಬಳಿಯಲ್ಲಿ ಸಣ್ಣ ಹೆರಿಗೆ ಆಸ್ಪತ್ರೆ ಇದ್ದು ಜನಸಂಖ್ಯೆಗೆ ಅನುಗುಣವಾಗಿ ನೂತನವಾಗಿ ಹೆರಿಗೆ ಆಸ್ಪತ್ರೆ ನಿರ್ಮಿಸಲು ಸರ್.ಎಂ.ವಿಶ್ವೇಶ್ವರಯ್ಯ 2ನೆ ಬ್ಲಾಕ್ ಬಡಾವಣೆಯಲ್ಲಿ ಬಿಡಿಎ ವತಿಯಿಂದ 3432 ಚ.ಮೀ.ನಷ್ಟು ಸಿಎ ನಿವೇಶನ ಮಂಜೂರಾಗಿದೆ. ಆದರೆ, ಹೆರಿಗೆ ಆಸ್ಪತ್ರೆ ನಿರ್ಮಿಸಲು ಬಿಬಿಎಂಪಿ ಮುಂದಾಗಿಲ್ಲ’ ಎಂದು ಮನವಿ ಸಲ್ಲಿಸಿದ್ದಾರೆ.
‘ಹೆರಿಗೆ ಆಸ್ಪತ್ರೆ ಇಲ್ಲದಿರುವುದರಿಂದ ಹೆಣ್ಣುಮಕ್ಕಳು ನಗರದ ಕೇಂದ್ರ ಭಾಗದಲ್ಲಿರುವ ವಾಣಿವಿಲಾಸ ಆಸ್ಪತ್ರೆಗೆ ತೆರಳುವಂತಾಗಿದೆ. ವಾಣಿವಿಲಾಸ ಆಸ್ಪತ್ರೆ ದೂರವಿರುವುದರಿಂದ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ 1ಲಕ್ಷ ರೂ. ವರಗೆ ಬಿಲ್ ಪಾವತಿಸಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಕೆಂಗೇರಿ ಭಾಗದಲ್ಲಿ ತುರ್ತಾಗಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಬಿಬಿಎಂಪಿಗೆ ಆದೇಶ ನೀಡಬೇಕು’ ಎಂದು ಸೋಮಶೇಖರ್ ಕೋರಿದ್ದಾರೆ.
‘ಕೆಂಗೇರಿ ಉಪನಗರದಲ್ಲಿರುವ ಎಲ್‍ಸಿ 10ರಲ್ಲಿ ಅತಿಹೆಚ್ಚು ಸಂಚಾರ ದಟ್ಟಣೆ ಆಗುತ್ತಿರುವುದರಿಂದ ಓವರ್ ಬ್ರಿಡ್ಜ್ ನಿರ್ಮಿಸುವಂತೆ ಮೈಲಸಂದ್ರ ಮತ್ತು ಕೆಂಗೇರಿ ಉಪನಗರದ ನಿವಾಸಿಗಳ ಒತ್ತಾಯ. ಮೇಲ್ಸೇತುವೆ ನಿರ್ಮಾಣದ ಕುರಿತಂತೆ ಸಮೀಕ್ಷೆ ನಡೆಸಿ ವರದಿ ತಯಾರಿಸಿದ್ದು ಅಗತ್ಯ ಕ್ರಮಕೈಗೊಳ್ಳುವಂತೆಯೂ ಮುಖ್ಯಮಂತ್ರಿಗೆ ಎಸ್.ಟಿ.ಸೋಮಶೇಖರ್ ಆಗ್ರಹಿಸಿದ್ದಾರೆ.
‘ಇದು ಯಾವುದೇ ಕಾರಣಕ್ಕೂ ರಾಜಕೀಯ ಭೇಟಿಯಲ್ಲ, ಕೇವಲ ಯಶವಂತಪುರ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಸೀಮಿತವಾಗಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದೇನೆ. ಇದರ ಹಿಂದೆ ಯಾವುದೇ ಅನ್ಯ ಉದ್ದೇಶವಿಲ್ಲ’
-ಎಸ್.ಟಿ.ಸೋಮಶೇಖರ್ ಮಾಜಿ ಸಚಿವ