ಚಿತ್ರದುರ್ಗ | ಕಲುಷಿತ ನೀರು ಸೇವನೆ ಪ್ರಕರಣ: ಮೃತರ ಸಂಖ್ಯೆ 2ಕ್ಕೆ ಏರಿಕೆ

Update: 2023-08-01 16:29 GMT

ಚಿತ್ರದುರ್ಗ, ಆ.1: ನಗರ ವ್ಯಾಪ್ತಿಯ ಕವಾಡಿಗರಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟಿದ್ದು, 21 ಮಂದಿ ತೀವ್ರ ಅಸ್ವಸ್ಥರಾಗಿರುವ ಘಟನೆ ಮಂಗಳವಾರ ವರದಿಯಾಗಿದೆ.

ಮೃತರನ್ನು ಮಂಜುಳಾ (23) ಹಾಗೂ ರಘು (24) ಎಂದು ಗುರುತಿಸಲಾಗಿದೆ. ಮಂಜುಳಾ ನಗರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ, ರಘು ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಸ್ವಸ್ಥರಾಗಿರುವವರನ್ನು ಸ್ಥಳೀಯ ಖಾಸಗಿ, ಸರಕಾರಿ, ದಾವಣಗೆರೆ ಮತ್ತು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಕವಾಡಿಗರಹಟ್ಟಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ನಗರಸಭೆ ಮತ್ತು ಗ್ರಾಮ ಪಂಚಾಯತ್ ಜಂಟಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದು, ನೀರು ಕಲುಷಿತವಾಗಿದ್ದರೂ ಶುಚಿಗೊಳಿಸದೆ ಸರಬರಾಜು ಮಾಡಲಾಗುತ್ತಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

ಯುವತಿಯ ಮೃತದೇಹ ನೋಡಲು ಶವಾಗಾರಕ್ಕೆ ಆಗಮಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರೊಂದಿಗೆ ಮಾತನಾಡಿದ ಗ್ರಾಮಸ್ಥರು, ಕುಡಿಯುವ ನೀರು ಕಲುಷಿತಗೊಂಡಿದ್ದರೂ ಸಂಬಂಧಿಸಿದ ಅಧಿಕಾರಿಗಳು ಅದೇ ನೀರನ್ನು ಸರಬರಾಜು ಮಾಡಿ, ಘಟನೆಗೆ ಕಾರಣವಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಯುವತಿಯ ಮೃತದೇಹವನ್ನು ಕೊಂಡೊಯ್ಯಬೇಕಾದರೆ ಜಿಲ್ಲಾಧಿಕಾರಿಯವರು ಆಸ್ಪತ್ರೆಗೆ ಭೇಟಿ ನೀಡಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರು ಕವಾಡಿಗರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News