ಚಿತ್ರದುರ್ಗದ ಕವಾಡಿಗರಹಟ್ಟಿ ಕಲುಷಿತ ನೀರು ಸೇವನೆ ಪ್ರಕರಣ: ಮೃತರ ಸಂಖ್ಯೆ ಐದಕ್ಕೆ ಏರಿಕೆ
Update: 2023-08-04 16:34 GMT
ಚಿತ್ರದುರ್ಗ, ಆ.4: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ತೀವ್ರ ಅಸ್ವಸ್ಥರಾಗಿದ್ದ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ವರದಿಯಾಗಿದೆ.
ಇದರೊಂದಿಗೆ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ.
ಕವಾಡಿಗರಹಟ್ಟಿಯ ರುದ್ರಪ್ಪ (70), ಪಾರ್ವತಮ್ಮ (60) ಮೃತಪಟ್ಟವರು ಎಂದು ತಿಳಿದು ಬಂದಿದೆ.
ವಾಂತಿ ಭೇದಿಯಿಂದ ಬಳಲುತ್ತಿದ್ದ ರುದ್ರಪ್ಪ ಅವರನ್ನು ಆ.2ರಂದು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ನಿಗಾ ಘಟಕದಲ್ಲಿ ಇವರು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ನಸುಕಿನ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಲುಷಿತ ನೀರು ಕುಡಿದು ಅಸ್ವಯಸ್ಥರಾಗಿದ್ದ ಪಾರ್ವತಮ್ಮ ಅವರಿಗೆ ಗುರುವಾರ ವಾಂತಿಭೇದಿ ಕಾಣಿಸಿಕೊಂಡಿದ್ದು, ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರೂ ಕೂಡ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.