ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ ಸಿಐಡಿ

ಬಿಜೆಪಿ ಶಾಸಕ ಮುನಿರತ್ನ
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಐಡಿ ತಂಡ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿರುವುದಾಗಿ ವರದಿಯಾಗಿದೆ.
ಶಾಸಕ ಮುನಿರತ್ನ ಸೇರಿ 7 ಮಂದಿ ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು 3 ಸಾವಿರ ಪುಟಗಳ ಚಾರ್ಜ್‍ಶೀಟ್‍ನಲ್ಲಿ ಶಾಸಕ ಮುನಿರತ್ನ, ಸುಧಾಕರ್, ಇನ್‍ಸ್ಪೆಕ್ಟರ್ ಐಯ್ಯಣ್ಣರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್‍ಕುಮಾರ್, ಮಂಜುನಾಥ್ ಎಂಬುವರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಎಚ್‍ಐವಿ ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆಗಳನ್ನು ಪಡೆದಿದ್ದರು. ಜತೆಗೆ ಸಾಕ್ಷ್ಯಗಳ ಹೇಳಿಕೆಯನ್ನೂ ಪಡೆಯಲಾಗಿತ್ತು. ಶಾಸಕ ಮುನಿರತ್ನ ಅವರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಗುತ್ತಿಗೆದಾರರಿಗೆ ಜೀವ ಬೆದರಿಕೆ, ಜಾತಿ ನಿಂದನೆ, ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಯತ್ನದ ಪ್ರಕರಣವನ್ನು ಶಾಸಕ ಮುನಿರತ್ನ ಎದುರಿಸುತ್ತಿದ್ದಾರೆ.