2.30 ಲಕ್ಷ ಮನೆ ಪೂರ್ಣಗೊಳಿಸಲು ಆರ್ಥಿಕ ನೆರವು ನೀಡಲು ಸಿಎಂ ಸಮ್ಮತಿ: ಸಚಿವ ಝಮೀರ್ ಅಹ್ಮದ್ ಖಾನ್
ಬೆಂಗಳೂರು, ಅ. 10: ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ನಿರ್ಮಿಸಲಾಗುತ್ತಿರುವ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಆರ್ಥಿಕ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಮಹತ್ವದ ತೀರ್ಮಾನದಿಂದ ಕಳೆದ ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಸತಿ ಯೋಜನೆ ಒಂದು ವರ್ಷ ದೊಳಗೆ ಪೂರ್ಣ ಗೊಳಿಸಿ ಹಂಚಿಕೆ ಮಾಡಲು ಸಹಕಾರಿ ಆಗಲಿದೆ ಎಂದರು.
2013 ರಿಂದ 2018 ರವರೆಗೆ ಮಂಜೂರು ಮಾಡಲಾಗಿರುವ ಮನೆಗಳ ಕಾಮಗಾರಿ ವಿವಿಧ ಹಂತಗಳಲ್ಲಿದ್ದು ಇದುವರೆಗೂ ಒಂದು ಮನೆ ಕೊಡಲು ಸಾಧ್ಯವಾಗಿಲ್ಲ. ಬಿಜೆಪಿ ಅವಧಿಯಲ್ಲಿ ಈ ಕುರಿತು ಗಮನ ಹರಿಸಿಲ್ಲ. ಜತೆಗೆ ಒಂದೆ ಒಂದು ಹೊಸ ಮನೆ ಕೊಟ್ಟಿಲ್ಲ. ಇದೀಗ ಫಲಾನುಭವಿಗಳ ವಂತಿಗೆ ಪಾವತಿ ದೊಡ್ಡ ಸಮಸ್ಯೆ ಆಗಿದೆ ಎಂದು ಅವರು ಹೇಳಿದರು.
ವಸತಿ ಯೋಜನೆ ಪೂರ್ಣ ಗೊಳಿಸಲು 8ಸಾವಿರ ಕೋಟಿ ರೂ.ಅಗತ್ಯ ಇರುವ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಆದಷ್ಟು ಶೀಘ್ರ ಮಾರ್ಗೋಪಾಯ ಹುಡುಕಲು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 2.30 ಲಕ್ಷ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಹಂತ ಹಂತವಾಗಿ ಅಗತ್ಯ ನೆರವು ನೀಡಲು ಮುಖ್ಯಮಂತ್ರಿ ತಾತ್ವಿಕ ಒಪ್ಪಿಗೆ ನೀಡಿದ್ದು, ವಸತಿ ಯೋಜನೆಗಳ ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಬಾಕಿ ಇರುವ ಅನುದಾನ ತಕ್ಷಣ ಒದಗಿಸುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 1.80 ಲಕ್ಷ ಮನೆ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ದಿಂದ 50 ಸಾವಿರ ಮನೆಗಳು ನಿರ್ಮಾಣ ಮಾಡಲಾಗುತ್ತಿದ್ದು ಆರ್ಥಿಕ ನೆರವು ಕಲ್ಪಿಸಿದರೆ ಮುಂದಿನ ವರ್ಷದೊಳಗೆ ಪೂರ್ಣ ಗೊಳಿಸಿ ಹಂಚಿಕೆ ಮಾಡಲಾಗುವುದು. ಅದೇ ರೀತಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರ ಒಂದು ಲಕ್ಷ ಮನೆ ಯೋಜನೆ ಪೂರ್ಣ ಗೊಳಿಸಲು 500 ಕೋಟಿ ರೂ. ಸಾಲದ ವ್ಯವಸ್ಥೆ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.
ವಸತಿ ಯೋಜನೆಗಳಿಗೆ ಜಿಎಸ್ಟಿ ವ್ಯಾಪ್ತಿಯಿಂದ ವಿನಾಯಿತಿ ನೀಡಲು ಕೇಂದ್ರ ಸರಕಾರಕ್ಕೆ ಪತ್ರ ಬರೆಯಲು ಸಭೆಯಲ್ಲಿ ನಿರ್ಧಾರ ಮಾಡಲಾಯಿತು. ಅದೇ ರೀತಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗವ ದಿಂದ ಸರಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಪ್ರಮಾಣ ಮೂರು ಲಕ್ಷ ರೂ.ಗಳಿಂದ ಐದು ಲಕ್ಷ ರೂ. ಗೆ ಹೆಚ್ಚಿಸಲು ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದರು ಎಂದು ಅವರು ವಿವರಿಸಿದರು.