ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಉಚ್ಚಾಟನೆ
ಬೆಂಗಳೂರು: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ.
ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರುʼʼಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ಮಾಡುವಂತೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ, ಉಚ್ಚಾಟಿಸುವ ನಿರ್ಧಾರ ಕೈಗೊಂಡಿದ್ದೇವೆʼʼ ಎಂದು ತಿಳಿಸಿದರು.
ʼʼಕುಮಾರಸ್ವಾಮಿ ಅವರ ರಾಜಕೀಯ ಬೆಳವಣಿಗೆಯನ್ನ ಮೊದಲಿನಿಂದ ರಾಷ್ಟ್ರೀಯ ನಾಯಕರು ಗುರುತಿಸಿದ್ದಾರೆ. ಅವರ ನಾಯಕತ್ವಕ್ಕೆ ರಾಷ್ಟ್ರದಲ್ಲಿ ಒಂದು ಮಾನ್ಯತೆ ಸಿಕ್ಕಿದೆ. ನಾವೆಲ್ಲಾ ಒಟ್ಟು ಸೇರಿ ಒಂದು ತೀರ್ಮಾನ ಮಾಡಿದ್ದೇವೆ. ಪಕ್ಷದ ಅಧ್ಯಕ್ಷ ಸ್ಥಾನ ಕುಮಾರಸ್ವಾಮಿ ಅವರಿಗೆ ನೀಡಲಾಗಿದೆʼʼ ಎಂದು ಅವರು ಹೇಳಿದರು.
ʼʼಅಡಹಾಕ್ʼʼ ಅಧ್ಯಕ್ಷರನ್ನಾಗಿ ಕುಮಾರಸ್ವಾಮಿ ನೇಮಕ
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಿ, ಪಕ್ಷದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ʼʼಅಡಹಾಕ್ʼʼ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟನೆ ತಿಳಿಸಿದೆ.