ಕೆಪಿಎಸ್ ಸಿ ಗೆಝೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಎರಡು ತಿಂಗಳ ಒಳಗೆ ಮರುಪರೀಕ್ಷೆಗೆ ಸಿಎಂ ಸೂಚನೆ

Update: 2024-09-02 08:18 GMT

ಬೆಂಗಳೂರು: ಕೆಪಿಎಸ್ ಸಿ ಗೆಝೆಟೆಡ್ ಪ್ರೊಬೇಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದ ಹಿನ್ನೆಲೆಯಲ್ಲಿ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ನಡೆಸುವಂತೆ ಕೆಪಿಎಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಕುರಿತು ತಮ್ಮ‘ಎಕ್ಸ್’ ಖಾತೆಯಲ್ಲಿ ಮುಖ್ಯಮಂತ್ರಿ ಮಾಹಿತಿ ನೀಡಿರುವ ಮುಖ್ಯಮಂತ್ರಿ, "ಕೆಪಿಎಸ್ ಸಿ ಗೆಝೆಟೆಡ್ ಪ್ರೊಬೇಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದ್ದಾರೆ.

"ಪರೀಕ್ಷೆಗೆ ಸಂಬಂಧಿಸಿ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ" ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕೆಎಎಸ್ 40 ಹುದ್ದೆಗಳೂ ಸೇರಿದಂತೆ ಗೆಝೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಆ.27ರಂದು ನಡೆದ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯ ಭಾಷಾಂತರದಲ್ಲಿ ಅನೇಕ ತಪ್ಪುಗಳಿದ್ದವು.

ಭಾಷಾಂತರದ ಸಮಸ್ಯೆಯಿಂದ ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ, ಮರು ಪರೀಕ್ಷೆ ನಡೆಸಬೇಕುಎಂದು ಕನ್ನಡಪರ ಸಂಘಟನೆಗಳು, ಸಾಹಿತಿಗಳೂ ಆಗ್ರಹಿಸಿದ್ದರು. ಕನ್ನಡ ರಕ್ಷಣಾ ವೇದಿಕೆಯು ನಗರದ ಫ್ರೀಡಂ ಪಾರ್ಕ್ ನಲ್ಲಿ ಸೋಮವಾರ ಈ ಬಗ್ಗೆ ಪ್ರತಿಭಟನೆ ಕೂಡಾ ಹಮ್ಮಿಕೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News