ಉತ್ತರಾಖಂಡದಲ್ಲಿ ಸಿಲುಕಿರುವ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಶಕ್ತಿಮೀರಿ ಪ್ರಯತ್ನ : ಸಿಎಂ ಸಿದ್ದರಾಮಯ್ಯ

Update: 2024-06-05 14:34 GMT

Photo: x/@siddaramaiah

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸ್ ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಅವರಿಗೆ ಇಂದೇ ಡೆಹ್ರಾಡೂನ್‍ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸುವಂತೆ ಸೂಚಿಸಿದ್ದೇನೆ. ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್ ಗಳು ಹಾಗೂ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಂಡು ಅಪಾಯದಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಗೂಡು ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News