ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು : ಸಿಎಂ ಸಿದ್ದರಾಮಯ್ಯ

Update: 2024-07-05 14:42 GMT

ಬೆಂಗಳೂರು : ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್ ಸಹ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಚಾಮರಾಜಪೇಟೆಯ ಸರಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು ಎಂದು ಅವರು ಇದೇ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮಕ್ಕಳಿಗೆ ವ್ಯಾಕರಣ ಪಾಠ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಕ್ಕಳಿಗೆ ವ್ಯಾಕರಣ ಪಾಠ ಮಾಡುವ ಮೂಲಕ ಗಮನ ಸೆಳೆದರು.

ಸಂಧಿ ಎಂದರೇನು? ಸಂಧಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು, ಯಾವಾಗ ಆರಂಭಿಸಿದರು ಎಂದು ಮುಖ್ಯಮಂತ್ರಿ ಮಾಡಿದ ಪ್ರಶ್ನೆಗೆ, ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ 1994-95 ರಲ್ಲಿ ಆರಂಭಿಸಿದ್ದಾಗಿ ಮುಖ್ಯಮಂತ್ರಿ ಹೇಳುತ್ತಿದ್ದಂತೆ ಮಕ್ಕಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.

ಮಕ್ಕಳಿಗೆ ಬಸವಣ್ಣನವರ ಮಹತ್ವ ತಿಳಿಸಿದ ಸಿಎಂ: ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡಿದ್ದು ಏಕೆ ಎಂದು ಕೇಳಿದ ಮುಖ್ಯಮಂತ್ರಿ, ಮನುಷ್ಯರ ನಡುವಿನ ತಾರತಮ್ಯ, ಜಾತಿ ವ್ಯವಸ್ಥೆ ವಿರೋಧಿಸಿ ಸಾಮಾಜಿಕ ಕ್ರಾಂತಿ ನಡೆಸಿದರು ತಾವೇ ಮಕ್ಕಳಿಗೆ ಉತ್ತರಿಸಿದರು. ಬಳಿಕ ಶಾಲೆಯಲ್ಲಿ ಮಕ್ಕಳೊಂದಿಗೆ ಮುಖ್ಯಮಂತ್ರಿ ಭೋಜನ ಸವಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News