ಕಾನೂನು ಸುವ್ಯವಸ್ಥೆಗೂ ಅಭಿವೃದ್ಧಿಗೂ ನೇರ ಸಂಬಂಧವಿದೆ : ಸಿಎಂ ಸಿದ್ದರಾಮಯ್ಯ

Update: 2024-07-06 14:49 GMT

Photo : x/@CMofKarnataka

ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶನಿವಾರ ನಗರದ ನಗರದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಪೋಲೀಸರ ಬಗ್ಗೆ ದೇಶದಲ್ಲಿ ಒಳ್ಳೆ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸ ಯಾರೂ ಮಾಡಬಾರದು. ಹೆಸರನ್ನು ಎತ್ತರಕ್ಕೇರಿಸುವ ಕೆಲಸ ಮಾಡಬೇಕು ಎಂದರು.

ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾ ಆದಾಯ ಹೆಚ್ಚಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಾರ್ವಜನಿಕರ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೊಲೀಸರು ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆ ಕೆಲಸ ಮಾಡಿದರೆ ಸರಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ ಎಂಬುದಾಗಿ ಸ್ಪಷ್ಟವಾಗಿ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಿಯಲ್ ಎಸ್ಟೇಟ್ ಮಾಡುವವರೊಂದಿಗೆ ಯಾವ ಕಾರಣಕ್ಕೂ ಶಾಮೀಲಾಗಬಾರದು. ಇವರೇ ಸ್ವತಃ ರಿಯಲ್ ಎಸ್ಟೇಟ್ ಮಾಡುವುದು ತಿಳಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಮಾದಕ ವಸ್ತು, ಕಳ್ಳತನ, ದರೋಡೆ, ಜೂಜು, ಮಟ್ಕಾ ಮುಂತಾದವು ಪೊಲೀಸರಿಗೆ ಗೊತ್ತಿಲ್ಲದೆ ನಡೆಯಲು ಸಾಧ್ಯವಿಲ್ಲ. ಕೆಲವೆಡೆ ಪೊಲೀಸರು ಇಂಥವರ ಜೊತೆ ಶಾಮೀಲಾಗುತ್ತಾರೆ. ಅವರು ಮನಸ್ಸು ಮಾಡಿದರೆ ಬಹುತೇಕ ಅಪರಾಧಗಳನ್ನು ತಡೆಯಲು ಸಾಧ್ಯ. ಇವರೆಲ್ಲರೂ ಜಾಗೃತರಾಗಲು ಪೊಲೀಸ್ ಅಧಿಕಾರಿಗಳು ಮೇಲಿಂದ ಮೇಲೆ ಭೇಟಿ ನೀಡಬೇಕು. ಕನಿಷ್ಠ ಒಂದು ತಿಂಗಳಲ್ಲಿ ಮೂರು ಠಾಣೆಗಳಿಗೆ ಭೇಟಿ ನೀಡಿ ಜನಸಂಪರ್ಕ ಮಾಡಿದರೆ ವಿಷಯ ತಿಳಿಯುತ್ತದೆ ಇದನ್ನು ಕಟ್ಟುನಿಟ್ಟಾಗಿ ಮಾಡಲು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪೊಲೀಸರ ಮಧ್ಯೆ ಸಮನ್ವಯದ ಕೊರತೆಯಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಒಂದು ಮಾಹಿತಿ ಬಂದರೆ ಅದರ ಬಗ್ಗೆ ಫಾಲೋ ಆಫ್ ಕ್ರಮ ವಹಿಸಬೇಕು. ಹುಬ್ಬಳ್ಳಿಯಲ್ಲಿ ನೇಹಾ ಕೊಲೆಯ ನಂತರ ಆದ ಮತ್ತೊಂದು ಕೊಲೆ ಪ್ರಕರಣದಲ್ಲಿ ಆರೋಪಿ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಾಗಲೇ ಕ್ರಮಕೈಗೊಂಡಿದ್ದಾರೆ ಕೊಲೆ ತಡೆಯಲು ಸಾಧ್ಯವಾಗುತ್ತಿತ್ತು ಎಂದು ಉದಾಹರಣೆಗಳನ್ನು ನೀಡಿ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಮಾಜದಲ್ಲಿ ಬೆಳವಣಿಗೆಯಾದಂತೆ ಹೊಸ ರೂಪದ ಅಪರಾಧಗಳು ಸೃಷ್ಟಿಯಾಗುತ್ತವೆ. ಅವುಗಳನ್ನು ತಡೆಯಲು ತಂತ್ರಜ್ಞಾನ ಸೇರಿದಂತೆ ಹೆಚ್ಚಿನ ತರಬೇತಿ ನೀಡಲು ಸೂಚಿಸಲಾಗಿದೆ.

ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಬೇಕು. ಜನಸಂದಣಿ ಇರುವಲ್ಲಿ ಹಾಗೂ ನಿರ್ಜನ ಪ್ರದೇಶದಲ್ಲಿ ಇ-ಬೀಟ್ ಹೆಚ್ಚು ಮಾಡಲಾಗುವುದು. ಪೊಲೀಸರ ಹಾಜರಿ ಸಮವಸ್ತ್ರದಲ್ಲಿರಬೇಕು. ಆಗ ಜನರಲ್ಲಿ ಭಯ ಮೂಡುತ್ತದೆ. ಇದರಿಂದ ಅಪರಾಧಗಳನ್ನು ನಿಲ್ಲಿಸಲು ಸಾಧ್ಯವಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಿಬಿಐ, ಸಿಐಡಿ ಕೂಡ ತನಿಖಾ ಸಂಸ್ಥೆಗಳೇ: ವಿರೋಧಪಕ್ಷದವರು ಪ್ರಕರಣಗಳನ್ನು ಸಿಬಿಐಗೆ ವಹಿಸಲು ಒತ್ತಾಯಿಸುತ್ತಾರೆ. ಆದರೆ, ಅಲ್ಲಿರುವವರೂ ನಮ್ಮ ಪೊಲೀಸರೇ. ಸಿಬಿಐ, ಸಿಐಡಿ ಕೂಡ ತನಿಖಾ ಸಂಸ್ಥೆಗಳೇ. ಅವರು ಅಧಿಕಾರದಲ್ಲಿದ್ದಾಗ ಚೋರ್ ಬಚಾವೋ ಸಂಸ್ಥೆ ಎನ್ನುತ್ತಿದ್ದರು. ಕೇಂದ್ರ ಸರಕಾರ ಬೇರೆ ಬೇರೆ ರಾಜ್ಯಗಳಲ್ಲಿನ ಅಪರಾಧಗಳನ್ನು ತನಿಖೆ ಮಾಡಲು ಸ್ಥಾಪಿಸಿರುವ ಸಂಸ್ಥೆ ಸಿಬಿಐ. ರಾಜ್ಯ ಪೋಲೀಸರು ಕೂಡ ತನಿಖೆ ಮಾಡಲು ಸಮರ್ಥರಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News