ಬಿಜೆಪಿಯವರು ಪ್ರಜಾಪ್ರಭುತ್ವದ ಕೊಲೆ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ನಡೆದಿರುವ ಚರ್ಚೆಗೆ ಸರಕಾರ ಏನು ಉತ್ತರ ಕೊಡುತ್ತಿದೆ ಅನ್ನೋದನ್ನು ಕೇಳಿಸಿಕೊಳ್ಳಲು ಸಿದ್ಧರಿಲ್ಲದ ಬಿಜೆಪಿಯವರು ಪ್ರಜಾಪ್ರಭುತ್ವದ ಕೊಲೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಚರ್ಚೆ ಮಾಡಿರುವ ವಿಷಯಕ್ಕೆ ಉತ್ತರಿಸಲು ನಾವು ಸಿದ್ಧವಿದ್ದೇವೆ. ಆದರೂ, ಯಾವ ಕಾರಣಕ್ಕಾಗಿ ಸದನದಲ್ಲಿ ಗದ್ದಲ ಎಬ್ಬಿಸುತ್ತಿದ್ದಾರೆ. ಅವರಿಗೆ ಪ್ರಜಾಪ್ರಭುತ್ವ ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲ ಎಂಬುದು ಅವರ ನಡವಳಿಕೆಯಿಂದ ಗೊತ್ತಾಗುತ್ತದೆ ಎಂದು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಸಿಬಿಐ ತನಿಖೆ ನಡೆಯುತ್ತಿದೆ. ಅಷ್ಟೇ, ಅಲ್ಲ, ಎಸ್‍ಐಟಿ ಹಾಗೂ ಈ.ಡಿ.ಯವರು ತನೀಖೆ ಮಾಡುತ್ತಿದ್ದಾರೆ. ಪದೇ ಪದೇ ಸಿಬಿಐ ತನಿಖೆಗೆ ಒತ್ತಾಯಿಸುವ ಬಿಜೆಪಿಯವರಿಗೆ ರಾಜ್ಯದ ಪೊಲೀಸರ ಮೇಲೆ ನಂಬಿಕೆಯಿಲ್ಲವೇ? ಅವರು ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನು ಸಿಬಿಐಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.
ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಈ.ಡಿ.ಯವರು ತಮ್ಮ ಹೆಸರು ಹೇಳುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಂದು ಬೆಳಗ್ಗೆ ನನ್ನ ಕಾನೂನು ಸಲಹೆಗಾರ ಪೊನ್ನಣ್ಣ ಪತ್ರಿಕಾಗೋಷ್ಠಿ ನಡೆಸಿ ಸಿಬಿಐ, ಈ.ಡಿ.ಯಲ್ಲಿರುವ 121 ಪ್ರಕರಣಗಳಲ್ಲಿ 115 ಪ್ರಕರಣಗಳು ಕಾಂಗ್ರೆಸ್ ನಾಯಕರ ಮೇಲೆ ದಾಖಲು ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೆ, ನಾವು ಕಾನೂನು ಪ್ರಕಾರ ತನಿಖೆಗೆ ಆದೇಶ ಮಾಡಿದ್ದೇವೆ. ಈ.ಡಿ.ಯವರು ಏನು ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲವೇ? ಉದ್ದೇಶಪೂರ್ವಕವಾಗಿ ಕಾನೂನು ಬಾಹಿರವಾಗಿ ಇಂತಹ ಪ್ರಯತ್ನ ಅವರು ಮಾಡುತ್ತಿದ್ದಾರೆ ಎಂದರು.