16ನೆ ಹಣಕಾಸು ಆಯೋಗ | ಅಸಮತೋಲನ ನಿವಾರಿಸಲು ಕ್ರಮ ಕೈಗೊಳ್ಳುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪ್ರಧಾನಮಂತ್ರಿ ತಿಳಿಸಿರುವ ‘ಸಹಕಾರಿ ಒಕ್ಕೂಟ’ ವನ್ನು ಉತ್ತೇಜಿಸಲು ಸಂವಿಧಾನದಲ್ಲಿ ಉಲ್ಲೇಖಿಸಿರುವ ಹಣಕಾಸು ಒಕ್ಕೂಟ ಮೂಲವಾಗಿದೆ. ಹಣಕಾಸು ಆಯೋಗ ನ್ಯಾಯಸಮ್ಮತ ಮತ್ತು ದಕ್ಷ ನಿಲುವುಗಳನ್ನು ಅನುಸರಿಸಿ ಎಲ್ಲ ರೀತಿಯ ಅಸಮತೋಲನಗಳ ನಿವಾರಣೆ ಕುರಿತು ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗುರುವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‍ನಲ್ಲಿ 16ನೇ ಹಣಕಾಸು ಆಯೋಗದ ಅಧ್ಯಕ್ಷ ಹಾಗೂ ಸದಸ್ಯರೊಂದಿಗೆ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಅಭಿವೃದ್ಧಿ ಕಥನದಲ್ಲಿ ಕರ್ನಾಟಕ ಪ್ರಧಾನ ಪಾತ್ರ ವಹಿಸುತ್ತಿದೆ. ಒಟ್ಟು ಜನಸಂಖ್ಯೆಯ ಶೇ.5ರಷ್ಟಿದ್ದರೂ, ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಅಂದಾಜು ಶೇ.8.4 ರಷ್ಟು ಪಾಲು ನೀಡುತ್ತಿದೆ ಎಂದು ತಿಳಿಸಿದರು.
ಪ್ರತಿ ವರ್ಷ ದೇಶದ ಒಟ್ಟು ತೆರಿಗೆ ಆದಾಯಕ್ಕೆ ಕರ್ನಾಟಕ ಸುಮಾರು 4 ಲಕ್ಷ ಕೋಟಿ ರೂ.ಗಳಷ್ಟು ಪಾಲು ನೀಡುತ್ತಿದ್ದರೂ, ರಾಜ್ಯಕ್ಕೆ ತೆರಿಗೆ ಪಾಲಿನ ರೂಪದಲ್ಲಿ 45 ಸಾವಿರ ಕೋಟಿ ರೂ. ಹಾಗೂ ಅನುದಾನದ ರೂಪದಲ್ಲಿ 15 ಸಾವಿರ ಕೋಟಿ ರೂ.ದೊರಕುತ್ತಿದೆ. ಅಂದರೆ ಪ್ರತಿ ಒಂದು ರೂಪಾಯಿಗೆ ರಾಜ್ಯ ಕೇವಲ 15 ಪೈಸೆಯನ್ನು ಮಾತ್ರ ಹಿಂದಕ್ಕೆ ಪಡೆಯುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನೀಡುವ ಪಾಲು ಶೇ.4.713 ಯಿಂದ ಶೇ.3.647 ಗೆ ತಗ್ಗಿಸಿದೆ. ಇದರಿಂದಾಗಿ 2021-26ರ 5 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ 68,275 ಕೋಟಿ ರೂ.ನಷ್ಟ ಉಂಟಾಗಿದೆ. ಕರ್ನಾಟಕಕ್ಕೆ ದೊರೆತ ಪಾಲಿನಲ್ಲಿ ಉಂಟಾದ ಇಷ್ಟು ದೊಡ್ಡ ಮೊತ್ತದ ಕಡಿತದ ಬಗ್ಗೆ ಹಣಕಾಸು ಆಯೋಗಕ್ಕೆ ಅರಿವಿದ್ದು, ರಾಜ್ಯಕ್ಕೆ 11,495 ಕೋಟಿ ರೂ.ನಿರ್ದಿಷ್ಟ ಅನುದಾನ ಒದಗಿಸಲು ಶಿಫಾರಸ್ಸು ಮಾಡಿದೆ ಎಂದು ಅವರು ತಿಳಿಸಿದರು.
ಆದರೆ ಕೇಂದ್ರ ಸರಕಾರ ಆಯೋಗದ ಈ ಶಿಫಾರಸ್ಸನ್ನು ಒಪ್ಪಿಕೊಂಡಿಲ್ಲ. ಆದುದರಿಂದ, ಕರ್ನಾಟಕ ಈ ಅನುದಾನ ಪಡೆಯುವಲ್ಲಿಯೂ ವಂಚಿತವಾಗಿದೆ. ಈ ಎಲ್ಲ ಕಾರಣಗಳಿಂದ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು 79,770 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
15ನೇ ಹಣಕಾಸು ಆಯೋಗದ ಅವಧಿಯಲ್ಲಿ ಇತರ ರಾಜ್ಯಗಳಿಗೆ ಪ್ರತಿ ವರ್ಷ 35 ಸಾವಿರದಿಂದ 40 ಸಾವಿರ ಕೋಟಿ ರೂ.ಗಳಷ್ಟು ಆದಾಯ ವರ್ಗಾವಣೆ ಆಗಿದೆ. ಇದು ಜಿಎಸ್‍ಡಿಪಿಯ ಶೇ.1.8ರಷ್ಟಿದೆ. ಈ ರೀತಿ ಪಾಲಿನ ಪರಿಗಣನೆಯಲ್ಲಿನ ಅಸಮತೋಲನದಿಂದಾಗಿ ಆರ್ಥಿಕವಾಗಿ ಹಾಗೂ ಜನಸಂಖ್ಯೆ ನಿಯಂತ್ರಣ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಕರ್ನಾಟಕ ಹಾಗೂ ಈ ರೀತಿಯ ರಾಜ್ಯಗಳು ದಂಡ ಎದುರಿಸುವಂತಾಗಿದೆ ಎಂದು ಅವರು ನುಡಿದರು.
ಸೆಸ್ ಮತ್ತು ಸರ್ಚಾರ್ಜ್ ಕೇಂದ್ರ ಮತ್ತು ರಾಜ್ಯಗಳ ನಡುವೆ ಹಂಚಿಕೊಳ್ಳುವ ಬಾಬ್ತಿನಲ್ಲಿ ಬರುವುದಿಲ್ಲ. ವರ್ಷದಿಂದ ವರ್ಷಕ್ಕೆ ಕೇಂದ್ರ ಸರಕಾರ ಸೆಸ್ ಮತ್ತು ಸರ್ಚಾರ್ಜ್ ಮೇಲಿನ ಅವಲಂಬನೆಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಬಂದಿದೆ. ಇದರಿಂದಾಗಿ ಒಟ್ಟು ತೆರಿಗೆ ಆದಾಯಕ್ಕೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯಗಳ ನಡುವೆ ಹಂಚಿಕೊಳ್ಳಬಹುದಾದ ಬಾಬ್ತಿನ ಪ್ರಮಾಣ ಹೆಚ್ಚಾಗುತ್ತಿಲ್ಲ ಎಂದು ಅವರು ಹೇಳಿದರು.
ಇದರಿಂದಾಗಿ ರಾಜ್ಯಗಳಿಗೆ ಬಹಳಷ್ಟು ನಷ್ಟ ಉಂಟಾಗುತ್ತಿದೆ. ಹಂಚಿಕೊಳ್ಳಬಹುದಾದ ಬಾಬ್ತಿನಲ್ಲಿ ಸೆಸ್ ಮತ್ತು ಸರ್ಚಾರ್ಜ್ ನಿಂದಾಗಿ ರಾಜ್ಯಕ್ಕೆ 2017-18 ರಿಂದ 2024-25 ನೇ ಅವಧಿಯಲ್ಲಿ 53,359 ಕೋಟಿ ರೂ.ಗಳಷ್ಟು ನಷ್ಟ ಉಂಟಾಗಿದೆ. ಕೇಂದ್ರ ಸರಕಾರದ ಪಾಲಿನಲ್ಲಿ ಇಷ್ಟೆಲ್ಲಾ ಕಡಿತ ಉಂಟಾಗಿದ್ದರೂ, ರಾಜ್ಯ ಸರಕಾರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.
ಬಂಡವಾಳ ವೆಚ್ಚದಲ್ಲಿ ಹೆಚ್ಚಳ ಉಂಟಾಗಿದ್ದರೂ, ಕರ್ನಾಟಕ 2013-14ರ ಅವಧಿಯಿಂದಲೂ ಬಂಡವಾಳ ವೆಚ್ಚದ ಮೊತ್ತವನ್ನು ತನ್ನ ಜಿಎಸ್‍ಡಿಪಿಯ ಶೇ.2ರ ಮಿತಿಯಲ್ಲಿಯೇ ನಿರ್ವಹಿಸಿದೆ. ಆದರೆ ಕೇಂದ್ರ ಹಣಕಾಸು ಪಾಲಿನಲ್ಲಿನ ಕಡಿತದಿಂದಾಗಿ ರಾಜ್ಯಗಳಿಗೆ ಭೌತಿಕ ಮತ್ತು ಮಾನವ ಮೂಲಸೌಲಭ್ಯಗಳ ಮೇಲೆ ಹೂಡಿಕೆಗೆ ಅನೇಕ ಮಿತಿಗಳು ಎದುರಾಗಿವೆ. ಈ ವಿಷಯವನ್ನು ಪರಿಹರಿಸಬೇಕಾಗಿದೆ ಎಂದು ಅವರು ಕೋರಿದರು.
ಆರ್ಥಿಕವಾಗಿ ಬಲಿಷ್ಠವಾಗಿರುವ ರಾಜ್ಯಗಳು ಇತರ ಬಡ ರಾಜ್ಯಗಳಿಗೆ ನೆರವಾಗಲು ಬದ್ಧವಾಗಿವೆ. ಆದರೆ ಇದು ತಮ್ಮದೇ ನಾಡಿನ ಜನರನ್ನು ಅಥವಾ ಆರ್ಥಿಕ ದಕ್ಷತೆಯನ್ನು ಸಂಕಷ್ಟಕ್ಕೆ ಸಿಲುಕಿಸಬಾರದು. ರಾಜ್ಯಗಳು ಗಳಿಸುವ ಸಂಪನ್ಮೂಲದ ಒಂದು ದೊಡ್ಡ ಪಾಲು ಅವುಗಳ ನಡುವೆಯೇ ಹಂಚಿಕೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ರಾಜ್ಯವು ಪ್ರಾದೇಶಿಕ ಅಸಮಾನತೆ, ನಗರೀಕರಣದ ಸವಾಲುಗಳನ್ನು ಎದುರಿಸುತ್ತಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಗೆ 55,586 ಕೋಟಿ ರೂ. ಬಂಡವಾಳ ಅಗತ್ಯವಿದೆ. ಇದರಲ್ಲಿ ಕೇಂದ್ರದಿಂದ ನಾವು 27,793 ಕೋಟಿ ರೂ.ಅನುದಾನ ಒದಗಿಸಲು ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಇದೇ ರೀತಿ ಕಲ್ಯಾಣ ಕರ್ನಾಟಕದ ಅಸಮತೋಲನ ನಿವಾರಣೆ ಮಾಡಲು ರಾಜ್ಯ 25 ಸಾವಿರ ಕೋಟಿ ರೂ.ಹೂಡಿಕೆ ಮಾಡುತ್ತಿದ್ದು, ಇದಕ್ಕೆ ಮುಂದಿನ ಐದು ವರ್ಷಗಳ ಅವಧಿಯಲ್ಲಿ 16ನೇ ಹಣಕಾಸು ಆಯೋಗ 25 ಸಾವಿರ ಕೋಟಿ ರೂ.ಹೊಂದಾಣಿಕೆ ಅನುದಾನ ಒದಗಿಸುವಂತೆ ಅವರು ಮನವಿ ಮಾಡಿದರು.
ಪಶ್ಚಿಮ ಘಟ್ಟ ವಲಯದಲ್ಲಿ ಪರಿಣಾಮಕಾರಿಯಾಗಿ ವಿಪತ್ತು ನಿರ್ವಹಣೆ ಮತ್ತು ಪರಿಹಾರ ಮತ್ತು ಪುನರ್ ವಸತಿಯನ್ನು ಖಾತ್ರಿಪಡಿಸಲು 10 ಸಾವಿರ ಕೋಟಿ ರೂ.ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿ ಕೋರಿದರು.
ರಾಜ್ಯದ ಶಿಫಾರಸ್ಸುಗಳು: ಕೇಂದ್ರ ಹಂಚಿಕೆ ಮಾಡುವ ಬಾಬ್ತಿನಲ್ಲಿ ಕನಿಷ್ಟ ಶೇ.50ರಷ್ಟು ಪಾಲನ್ನು ಸಂಬಂಧಿಸಿದ ರಾಜ್ಯಗಳಿಗೆ ನಿಗದಿಪಡಿಸಬೇಕು. ಸೆಸ್ ಮತ್ತು ಸರ್ಚಾರ್ಜ್ ಒಟ್ಟು ತೆರಿಗೆ ಆದಾಯದ ಶೇ.5ಕ್ಕೆ ಮಿತಿಗೊಳಿಸಬೇಕು. ಇದಕ್ಕಿಂತ ಹೆಚ್ಚಾಗುವ ಯಾವುದೇ ಮೊತ್ತವನ್ನು ಹಂಚಿಕೊಳ್ಳುವ ಬಾಬ್ತಿಗೆ ಪರಿಗಣಿಸಬೇಕು ಎಂದು ಮುಖ್ಯಮಂತ್ರಿ ಶಿಫಾರಸ್ಸು ಮಾಡಿದರು.
ಕೇಂದ್ರ ಸರಕಾರದ ತೆರಿಗೇತರ ಆದಾಯವನ್ನು ಹಂಚಿಕೊಳ್ಳುವ ತೆರಿಗೆ ಬಾಬ್ತಿನ ವ್ಯಾಪ್ತಿಗೆ ತರುವ ಕುರಿತು ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತರಬೇಕು. ಪಾಲಿನ ಹಂಚಿಕೆ ಸಂದರ್ಭದಲ್ಲಿ ದಕ್ಷತೆ ಮತ್ತು ನಿರ್ವಹಣೆಗೆ ಸೂಕ್ತ ಪುರಸ್ಕಾರ ನೀಡುವ ಬಗ್ಗೆ ಆಯೋಗ ದಿಟ್ಟ ನಿಲುವು ತಳೆಯಬೇಕು. ಪಾಲಿನ ಹಂಚಿಕೆ ಸಂದರ್ಭದಲ್ಲಿ, ಹಂಚಿಕೊಳ್ಳುವ ಬಾಬ್ತಿನಲ್ಲಿ ರಾಜ್ಯಗಳಿಗೆ ತಮ್ಮ ದೇಣಿಗೆಯ ಶೇ.60ರಷ್ಟನ್ನು ನೀಡಬೇಕು ಎಂದು ಅವರು ಶಿಫಾರಸ್ಸು ಮಾಡಿದರು.
ಕೇಂದ್ರ ಮತ್ತು ರಾಜ್ಯಗಳ ನಡುವಣ ಆರ್ಥಿಕ ಸಂಬಂಧ ಅತ್ಯಂತ ಮಹತ್ವವಾಗಿರುವ ಇಂದಿನ ಸಂದರ್ಭದಲ್ಲಿ, 16ನೇ ಹಣಕಾಸು ಆಯೋಗ ಮಾಡುವ ಶಿಫಾರಸ್ಸುಗಳು, ಸುಸ್ಥಿರ ಮತ್ತು ಸಮಗ್ರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಸಭೆಯಲ್ಲಿ 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯಾ, ಸದಸ್ಯರಾದ ಅಜಯ್ ನಾರಾಯಣ ಝಾ, ಅನ್ನಿ ಜಾರ್ಜ್ ಮ್ಯಾಥ್ಯೂ, ಡಾ.ಮನೋಜ್ ಪಾಂಡಾ ಮತ್ತು ಡಾ.ಸೌಮ್ಯ ಕಾಂತಿ ಘೋಷ್, ಸಚಿವ ಸಂಪುಟದ ಸದಸ್ಯರು, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.