‘ಸೆ.15ಕ್ಕೆ ವಿಶ್ವ ಪ್ರಜಾಪ್ರಭುತ್ವ ದಿನ’ | ಪ್ರಜಾಪ್ರಭುತ್ವ ಚಳವಳಿಗೆ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ

Update: 2024-09-05 15:02 GMT

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 ಕಿ.ಮೀ. ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ಗುರುವಾರ ವಿಧಾನಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವವಾದಿಗಳು ಹೆಚ್ಚು ಪ್ರಮಾಣದಲ್ಲಿದ್ದರೂ ಅವರು ಹೆಚ್ಚು ಕ್ರಿಯಾಶೀಲವಾಗಿಲ್ಲ. ಪ್ರಜಾಪ್ರಭುತ್ವ ನಾಶಕ್ಕೆ ಯತ್ನಿಸುತ್ತಿರುವವರನ್ನು ನಾವು ಮೆಟ್ಟಿ ನಿಲ್ಲೋಣ ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಬೀದರ್ ನಿಂದ ಚಾಮರಾಜನಗರದವರೆಗೂ ನಡೆಯುತ್ತಿರುವ ಅಭೂತಪೂರ್ವ, ಐತಿಹಾಸಿಕ ಮಾನವ ಸರಪಳಿ ಚಳವಳಿಯನ್ನು ಯಶಸ್ವಿಗೊಳಿಸಬೇಕು. ನಾನೂ ವಿಧಾನಸೌಧದ ಎದುರು ಮಾನವ ಸರಪಳಿಯಲ್ಲಿ ಇರುತ್ತೇನೆ. ಎಲ್ಲರೂ ಭಾಗವಹಿಸಿ ಎಂದು ಕರೆ ನೀಡಿದ ಅವರು, ಪ್ರಜಾಪ್ರಭುತ್ವ, ಸಂವಿಧಾನ ಉಳಿದರೆ ಮಾತ್ರ ದೇಶದ ಅಭಿವೃದ್ಧಿ ಮತ್ತು ಸಾಮಾಜಿಕ ಬದಲಾವಣೆ ಸಾಧ್ಯ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪೌರಾಡಳಿತ ಸಚಿವ ರಹೀಂಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ 200ಕ್ಕೂ ಹೆಚ್ಚು ಸ್ವಯಂ ಸೇವಾ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News