ಡ್ರಗ್ ಜಾಲದ ಬೇರು ಕತ್ತರಿಸಲು ತೀರ್ಮಾನ, ಗೃಹ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ : ಸಿಎಂ ಸಿದ್ದರಾಮಯ್ಯ

Update: 2024-09-18 13:34 GMT

ಸಿಎಂ ಸಿದ್ದರಾಮಯ್ಯ(PC:x/@siddaramaiah)

ಬೆಂಗಳೂರು : ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನಿಸಲಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ವಿಶೇಷವಾದ ಟಾಸ್ಕ್ ಫೋರ್ಸ್ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಡ್ರಗ್ ದಂಧೆ ಹತ್ತಿಕ್ಕಲು ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ ಎಂದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದ ಟಾಸ್ಕ್ ಫೋರ್ಸ್‍ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ. ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ, ಠಾಣಾಧಿಕಾರಿ, ಡಿವೈಎಸ್‍ಪಿ, ಎಸಿಪಿ ಮತ್ತು ಎಸ್‍ಪಿಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಇವರ ವಿರುದ್ಧ ಕ್ರಮ ಖಚಿತ ಎಂದು ಅವರು ಎಚ್ಚರಿಕೆ ನೀಡಿದರು.

ಅಗತ್ಯಬಿದ್ದರೆ ಹೊಸ ಕಾನೂನು ಮಾಡುತ್ತೇವೆ. ಇರುವ ಕಾನೂನನ್ನು ಇನ್ನಷ್ಟು ಗಟ್ಟಿ ಮಾಡುತ್ತೇವೆ. ಪೆಡ್ಲರ್‌ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ವಹಿಸಲಾಗುತ್ತದೆ. ಎನ್‍ಸಿಸಿ, ಎನ್‍ಜಿಒ ಘಟಕಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಡ್ರಗ್ ಹಾವಳಿ ತೊಡೆದುಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿಗಳು, ಯುವ ಜನರು ಹಾಗೂ ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮ ವಹಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ ಹಾವಳಿ ಹತ್ತಿಕ್ಕಲು ಗಂಭೀರ ಚರ್ಚೆ ನಡೆಸಿದ್ದೇವೆ. ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳು ತಮ್ಮ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್‌ಗಳಲ್ಲಿ ನಿಯಮಿತವಾಗಿ ಜಾಗೃತಿ ಮೂಡಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಈಗಾಗಲೇ ಇರುವ ರಾಜ್ಯಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ. ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಬೆಂಗಳೂರು ಪೂರ್ವ ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಒಡಿಶಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸರೇ ಹೊಣೆಗಾರರು..!

ಪೊಲೀಸ್ ಇಲಾಖೆಗೆ ಮಾದಕ ವಸ್ತುಗಳ ಮಾರಾಟ, ಸರಬರಾಜು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಮಾದಕ ವಸ್ತುಗಳ ಹಾವಳಿ ಹೆಚ್ಚಾಗಿರುವ ಸೂಕ್ಷ್ಮ ಪೊಲೀಸ್ ಠಾಣಾ ವ್ಯಾಪ್ತಿಗಳನ್ನು ಗುರುತಿಸಿ, ಅಂತಹ ಕಡೆ ಮಾದಕ ವಸ್ತುಗಳ ನಿಯಂಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಆಯಾ ಠಾಣೆಯ ಇನ್‍ಸ್ಪೆಕ್ಟರ್‌ ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ಔಷಧಿ ಮಳಿಗೆಗಳ ಮೇಲೆ ನಿಗಾ..!

ಔಷಧಿ ಮಳಿಗೆಗಳಲ್ಲಿ ಅನಧಿಕೃತವಾಗಿ ಸಿಂಥೆಟಿಕ್ ಡ್ರಗ್ಸ್, ಸೈಕೋಟ್ರೋಪಿಕ್ ಸಬ್‍ಸ್ಟೆನ್ಗ್ಸಳ ಮಾರಾಟವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲು ಸೂಚಿಸಲಾಯಿತು. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾದವರ ಪರವಾನಗಿಯನ್ನು ರದ್ದುಪಡಿಸಲು ಸೂಚಿಸಲಾಯಿತು. ಔಷಧಿ ಮಳಿಗೆಗಳ ಮೇಲೆ ನಿರಂತರ ನಿಗಾ ಇರಿಸಿ, ಆಗಿಂದಾಗ್ಗೆ ಪರಿಶೀಲನೆ ನಡೆಸುವಂತೆ ಡ್ರಗ್ಸ್ ಕಂಟ್ರೋಲ್ ಇಲಾಖೆಗೆ ಸೂಚನೆ ನೀಡಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News