ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ | ಸಿವಿಲ್ ಕಾಮಗಾರಿ ಒಂದು ತಿಂಗಳಲ್ಲಿ ಪೂರ್ಣಗೊಳಿಸಬೇಕು : ಸಿಎಂ ಸಿದ್ದರಾಮಯ್ಯ

Update: 2024-09-23 12:51 GMT

ಬೆಂಗಳೂರು : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ 179.30 ಕೋಟಿ ರೂ.ಟೆಂಡರ್ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಸೈನಿಕ ಶಾಲೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನುಳಿದ ಸಿವಿಲ್ ಕಾಮಗಾರಿಗಳನ್ನು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ನಾಲ್ಕನೆ ಸಭೆಯಲ್ಲಿ ಮಾತನಾಡಿದ ಅವರು, ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿರುವ 30ಕೋಟಿ ರೂ.ಕಾಮಗಾರಿ ಅನುಷ್ಠಾನ ಕುರಿತು ಕುರಿತು ಜಿಲ್ಲಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಪರಿಶೀಲಿಸಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ವರ್ಟಿಕಲ್ ಶಾಲೆ ಪ್ರಾರಂಭಿಸುವ ಕುರಿತು ಪರಿಶೀಲನೆ ಮಾಡುವಂತೆ ಸೂಚಿಸಿದ ಮುಖ್ಯಮಂತ್ರಿ, ಸೈನಿಕ ಶಾಲೆಯಲ್ಲಿ ಖಾಯಂ ಶಿಕ್ಷಕರ ನೇಮಕಾತಿಗೆ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಪ್ರಾಧಿಕಾರದಿಂದ ಸಂಗೊಳ್ಳಿ ರಾಯಣ್ಣ ಸ್ಮಾರಕಗಳ ಅಭಿವೃದ್ಧಿ ಕುರಿತಂತೆ, ಸೌಲಭ್ಯ ಕಲ್ಪಿಸುವ ಕುರಿತಂತೆ ನೀಲ ನಕಾಶೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರಿಗೆ ಸೂಚನೆ ನೀಡಿದ ಮುಖ್ಯಮಂತ್ರಿ, ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಈ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಢ ಗ್ರಾಮದಲ್ಲಿ 75.29 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದು, ನವೆಂಬರ್ ಎರಡನೇ ವಾರದ ಒಳಗಾಗಿ ಎಲ್ಲ ಕಾಮಗಾರಿ ಪೂರ್ಣಗೊಳಿಸಬೇಕು. ನಂದಗಢದಲ್ಲಿ ಕೆರೆ ಅಭಿವೃದ್ಧಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಯ ಕಾಮಗಾರಿಗಳನ್ನೂ ಇದೇ ಗಡುವಿನೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚಿಸಿದರು.

ಸಂಗೊಳ್ಳಿ ರಾಯಣ್ಣ ಮ್ಯೂಸಿಯಂಗೆ ಕಾಂಪೌಂಡ್ ನಿರ್ಮಾಣಕ್ಕೆ ಅಗತ್ಯವಾದ ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಸೂಚಿಸಿದ ಸಿದ್ದರಾಮಯ್ಯ, ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿಯನ್ನು ಈಗಾಗಲೇ ಲೋಕಾರ್ಪಣೆ ಮಾಡಲಾಗಿದ್ದು, ಉತ್ತಮ ಪ್ರವಾಸಿ ತಾಣವಾಗಿ ರೂಪುಗೊಂಡಿದೆ. ಇಲ್ಲಿ ಪ್ರವಾಸಿಗರಿಗೆ ಅನುಕೂಲ ಮಾಡುವ ಉದ್ದೇಶದಿಂದ ಪ್ರವಾಸಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ 2024-25 ನೇ ಸಾಲಿನ ಕ್ರಿಯಾ ಯೋಜನೆ 15.48 ಕೋಟಿ ರೂ.ಗಳಿಗೆ ಅನುಮೋದನೆ ಸಭೆಯಲ್ಲಿ ನೀಡಲಾಯಿತು. ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಸಲಹಾ ಸಮಿತಿ ರಚನೆ ಮಾಡಲು ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News