ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ಸಂಸದರು ರಾಜ್ಯದ ಜನರಿಗೆ ದ್ರೋಹ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

Update: 2024-10-13 07:50 GMT

ಮೈಸೂರು : "ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ಸಂಸದರು ರಾಜ್ಯದ ಪರ ಧ್ವನಿ ಎತ್ತದೆ, ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಟಿ.ಕೆ.ಲೇಔಟ್ ನಲ್ಲಿರುವ ತಮ್ಮ ನಿವಾಸದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಕೇಂದ್ರದಿಂದ ರಾಜ್ಯಕ್ಕೆ ಕೇವಲ 6498 ಕೋಟಿ ರೂ.ಗಳ ತೆರಿಗೆ ಪಾಲು ಬಂದಿದ್ದು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. 31 ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ಹಣ ಉತ್ತರ ಪ್ರದೇಶಕ್ಕೆ ನೀಡಲಾಗಿದೆ. ನಮಗೆ ತೆರಿಗೆ ಪಾಲಿನಲ್ಲಿ ಅನ್ಯಾಯವಾಗಿರುವುದಕ್ಕೆ ರಾಜ್ಯದ ಜನರು ಕೇಂದ್ರದ ವಿರುದ್ಧ ಧ್ವನಿ ಎತ್ತಬೇಕು. ಬಿಜೆಪಿಯವರು, ಕೇಂದ್ರ ಸರಕಾರವನ್ನು ಸಮರ್ಥಿಸಿಕೊಂಡು ಮಾತನಾಡುತ್ತಿರುವುದು ಕರ್ನಾಟಕದ ಜನರಿಗೆ ಮಾಡುವ ದ್ರೋಹವಾಗಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಪ್ರಹ್ಲಾದ್ ಜೋಶಿ ಇರಬಹುದು ಅಥವಾ ಇತರ ಸಂಸದರು ಇರಬಹುದು, ಅವರೆಲ್ಲರೂ ಕರ್ನಾಟಕಕ್ಕೆ ದ್ರೋಹ ಮಾಡುತ್ತಿದ್ದಾರೆ. ಜನರು ಅಷ್ಟೊಂದು ಜನ ಸಂಸದರನ್ನು ಗೆಲ್ಲಿಸಿಕೊಟ್ಟರಲ್ಲಾ? ಆ ಸಂಸದರೆಲ್ಲರೂ ಕರ್ನಾಟಕದ ಪರವಾಗಿ ಧ್ವನಿ ಎತ್ತಬೇಕಲ್ಲವೇ? ಇವತ್ತಿನವರೆಗೂ ಅವರು ಧ್ವನಿ ಎತ್ತಿಲ್ಲ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಕಳೆದ ಐದು ವರ್ಷಗಳಲ್ಲಿ 60 ಸಾವಿರ ಕೋಟಿ ರೂ.ನಷ್ಟವಾಗಿದೆ ಎಂದು ಹೇಳಿದರು.

ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದ ಪ್ರಕರಣ ವಾಪಸ್‌ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಕ್ಕೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿಯವರು ಹಿಂದೆ ಆರೆಸ್ಸೆಸ್‌ನವರ ಕೇಸ್‌ಗಳನ್ನು ವಾಪಸ್ ಪಡೆದಿದ್ದರಲ್ಲ? ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷರೂ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಅದನ್ನು ತೀರ್ಮಾನಿಸಿ ಸಚಿವ ಸಂಪುಟ ಸಭೆಗೆ ತಂದಿದ್ದರು. ಅದನ್ನು ಸಭೆ ಒಪ್ಪಿದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗುತ್ತದೆ, ನ್ಯಾಯಾಲಯ ಒಪ್ಪಿದರೆ ಮಾತ್ರ ಕೇಸ್‌ಗಳನ್ನು ವಾಪಸ್ ಪಡೆಯಲು ಸಾಧ್ಯವಾಗುತ್ತದೆʼ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News