ಉಪಚುನಾವಣೆಯಲ್ಲಿ 3 ಕ್ಷೇತ್ರಗಳನ್ನೂ ಗೆಲ್ಲಲು ಎಲ್ಲರೂ ಶ್ರಮಿಸಬೇಕು : ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು : ‘ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಸೇರಿದಂತೆ ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು, ಮೂರು ಕ್ಷೇತ್ರಗಳನ್ನೂ ಕಾಂಗ್ರೆಸ್ ಪಕ್ಷ ಗೆಲ್ಲಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸಲಹೆ ನೀಡಿದ್ದಾರೆ.
ರವಿವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವರುಗಳ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದುದರಿಂದ ಎಲ್ಲ ಸಚಿವರು ಸಂಪೂರ್ಣ ಶ್ರಮ ಹಾಕಿ ಚುನಾವಣೆ ನಿರ್ವಹಿಸಬೇಕು’ ಎಂದು ಸೂಚಿಸಿದರು.
ಪ್ರತೀ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಸವಾಲಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು. ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿಯ ವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳನ್ನು ಸರಿಯಾಗಿ ಪ್ರತಿರೋಧವೊಡ್ಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
ಮೂರು ಕ್ಷೇತ್ರಗಳ ಉಪಚುನಾವಣೆ ಮುಗಿಯುವವರೆಗೂ ಸಿಬಿಐ, ಈಡಿ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಮಾಣ ಇನ್ನೂ ಹೆಚ್ಚಲಿದೆ. ಹೀಗಾಗಿ ಅತ್ಯಂತ ಎಚ್ಚರಿಕೆಯಿಂದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಸುಳ್ಳೇ ಬಿಜೆಪಿ ಬಂಡವಾಳ: ಸಾಮಾಜಿಕ-ಆರ್ಥಿಕ (ಜಾತಿ ಗಣತಿ) ಸಮೀಕ್ಷೆ ವರದಿ, ಪರಿಶಿಷ್ಟರ ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಪ್ರವರ್ಗ 2-ಎ ಬೇಡಿಕೆ ಕುರಿತಂತೆ ಅಪಪ್ರಚಾರ ಮಾಡುತ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆಯೂ ನಮ್ಮ ನಿಲುವು ಸ್ಪಷ್ಟವಾಗಿದ್ದು ಆಯಾ ಸಮುದಾಯದ ಮುಖಂಡರು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ನಮ್ಮ ಬೆಂಬಲ ಇರುವುದನ್ನು ಮನದಟ್ಟು ಮಾಡಿಸಿದ್ದೇವೆ. ಆದರೂ ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಭಯಾನಕ ಅಪಪ್ರಚಾರ ಮಾಡುತ್ತದೆ. ಸುಳ್ಳುಗಳ ಹೊರತಾಗಿ ಬಿಜೆಪಿಗೆ ಬೇರೆ ಬಂಡವಾಳ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆಂದು ಗೊತ್ತಾಗಿದೆ.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್, ಎನ್.ಎಸ್.ಭೋಸರಾಜ್, ಎಸ್.ಎಸ್.ಮಲ್ಲಿಕಾರ್ಜುನ್, ಕೆ.ವೆಂಕಟೇಶ್, ಕೆ.ಎಚ್.ಮುನಿಯಪ್ಪ, ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಡಾ.ಸುಧಾಕರ್, ಝಮೀರ್ ಅಹ್ಮದ್ ಖಾನ್, ಭೈರತಿ ಸುರೇಶ್, ಶಿವಾನಂದ ಪಾಟೀಲ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.